– ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸರ್ವಪಕ್ಷ ಸಭೆ ಖಂಡನೆ
– ಶುಕ್ರವಾರ ಅನಂತನಾಗ್ ಜಿಲ್ಲೆಗೆ ರಾಹುಲ್ ಗಾಂಧಿ ಭೇಟಿ
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯು (All-party meeting) ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಸರ್ವಾನುಮತದಿಂದ ಖಂಡಿಸಿದೆ.
ಸಭೆಯ ಬಳಿಕ ಮಾತನಾಡಿದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ರಾಜಕೀಯ ಪಕ್ಷಗಳು ಇದನ್ನು ಪಹಲ್ಗಾಮ್ ದಾಳಿಯನ್ನ ಏಕರೂಪವಾಗಿ ಖಂಡಿಸಿವೆ. ಉಗ್ರರರನ್ನು ಮಟ್ಟಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡರೂ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ.
ಇನ್ನೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಪುನಃ ಸ್ಥಾಪಿಸಬೇಕೆಂದು ನಾವು ಬಯಸುತ್ತೇವೆ. ನಾಳೆ (ಏ.25) ರಾಹುಲ್ ಗಾಂದಿ ಅವರು ಕಾಶ್ಮೀರದ ಅನಂತನಾಗ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಉಗ್ರರ ದಾಳಿಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲಿದ್ದಾರೆ ಎಂದು ತಿಳಿಸಿದರು.
ಇನ್ನೂ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಮಾತನಾಡಿ, ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ನಾವು ಕೇಂದ್ರದೊಂದಿಗೆ ಇದ್ದೇವೆ. ದೇಶವು ಒಗ್ಗಟ್ಟಿನಿಂದ ಹೋರಾಡಬೇಕು. ಎಲ್ಲಾ ರಾಜಕೀಯ ಪಕ್ಷಗಳ ಮುಖ್ಯಸ್ಥರು ಇಂದಿನ ಸಭೆಯಲ್ಲಿ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ ಎಂದರು.
ಇದಕ್ಕೂ ಮುನ್ನ ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್, ನಿರ್ಮಲಾ ಸೀತಾರಾಮನ್, ಕಿರಣ್ ರಿಜಿಜು, ಜೆ.ಪಿ ನಡ್ಡಾ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು. ಉಗ್ರರ ದಾಳಿ ಹಾಗೂ ಬುಧವಾರ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಅಮಿತ್ ಶಾ ಹಾಗೂ ರಾಜನಾಥ್ ಸಿಂಗ್ ಸಭೆಗೆ ಮಾಹಿತಿ ನೀಡಿದರು.