– ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ ಚಾಮುಂಡೇಶ್ವರಿ
– ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ಕ್ಯಾಪ್ಟನ್ ಅಭಿಮನ್ಯು
ಮೈಸೂರು: ಲಕ್ಷಾಂತರ ಜನರು ಕಾತುರದಿಂದ ಕಾದಿದ್ದ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಜಂಬೂಸವಾರಿಗೆ(Jambusavari) ಅದ್ದೂರಿ ಚಾಲನೆ ಸಿಕ್ಕಿದೆ.
ಸಂಜೆ 4.42ರಿಂದ 5.06 ಅವಧಿಯ ಶುಭ ಕುಂಭ ಲಗ್ನದಲ್ಲಿ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಸಿಎಂ ಜೊತೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾಲಾಟ್ಕರ್ ಪುಷ್ಪಾರ್ಚನೆ ಮಾಡಿದರು.
ಅಲಂಕೃತಗೊಂಡ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ನಾಡ ಅಧಿದೇವತೆ ಚಾಮುಂಡಿತಾಯಿಯನ್ನು (Chamundeshwari) ಹೊತ್ತು 6ನೇ ಬಾರಿ ಅಭಿಮನ್ಯು (Abhimnyu) ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ.
ದಸರಾ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಧನಂಜಯ ಹೆಜ್ಜೆ ಹಾಕಿದರೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪ, ನೌಫತ್ ಆನೆಯಾಗಿ ಗೋಪಿ, ಪಟ್ಟದ ಆನೆಯಾಗಿ ಶ್ರೀಕಂಠ ಮತ್ತು ಲಕ್ಷ್ಮಿ ಹೆಜ್ಜೆ ಹಾಕುತ್ತಿವೆ. ಸಾಲಾನೆಯಾಗಿ ಮಹೇಂದ್ರ, ಭೀಮ, ಕಂಜನ್, ಏಕಲವ್ಯ, ಪ್ರಶಾಂತ, ಸುಗ್ರೀವ, ಹೇಮಾವತಿ ಈ ಆನೆಗಳು ಅಭಿಮನ್ಯುವಿಗೆ ಸಾಥ್ ನೀಡುತ್ತಿವೆ.
ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ಚಾಮುಂಡಿತಾಯಿಯನ್ನು ಕಣ್ತುಂಬಿಕೊಂಡು ಜನರು ಧನ್ಯತಾ ಭಾವ ಮೆರೆದರು. ದಸರಾ ಜಂಬೂಸವಾರಿ ವೀಕ್ಷಿಸಲು ಅರಮನೆ ಅಂಗಳದಲ್ಲಿ 48 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿತ್ತು.
ದಸರಾ ಜಂಬೂಸವಾರಿಗೆ ಸ್ತಬ್ಧಚಿತ್ರ ಹಾಗೂ ವಿವಿಧ ಕಲಾತಂಡಗಳು ಮೆರುಗು ನೀಡುತ್ತಿವೆ. ಒಟ್ಟು 57 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ. ಮೆರವಣಿಗೆಯಲ್ಲಿ ಸಾಗುವ ದಾರಿಯಲ್ಲಿ 140ಕ್ಕೂ ಹೆಚ್ಚು ಕಲಾ ತಂಡಗಳು ಭಾಗಿಯಾಗಿವೆ.
ಉತ್ತರ ದ್ವಾರದ ಮೂಲಕ ತೆರಳಿರುವ ಜಂಬೂಸವಾರಿ ಮೆರವಣಿಗೆ ಕೆ.ಆರ್ ಸರ್ಕಲ್, ಸಯ್ಯಾಜಿರಾವ್ ರಸ್ತೆ, ಸರ್ಕಾರಿ ಆಯುರ್ವೇದ ಸರ್ಕಲ್, ಬಂಬೂ ಬಜಾರ್, ಹೈವೇ ಸರ್ಕಲ್ ಮೂಲಕ ಸಾಗಿ ಸಂಜೆ ವೇಳೆಗೆ ಬನ್ನಿಮಂಟಪ ಪಂಜಿನ ಕವಾಯತು ಮೈದಾನ ತಲುಪಲಿದೆ.