ಬೆಂಗಳೂರು: ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.
ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರಿಗೆ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ. ಹೈಕಮಾಂಡ್‌ನವರು ನವದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ʻಶ್ರೀರಾಮ, ಲಕ್ಷ್ಮಣ, ರಾವಣ ಆದರ್ಶ ವ್ಯಕ್ತಿಗಳಲ್ಲ, ಕ್ರೂರಿಗಳುʼ- ಲಲಿತಾ ನಾಯ್ಕ್ ವಿರುದ್ಧ ಕೇಸ್
ಸಿಎಂ ನಿವಾಸ ಕಾವೇರಿಯಲ್ಲಿ ಬೆಳಗ್ಗೆ 9:30ಕ್ಕೆ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಯಲಿದೆ. ಮೊದಲು ನೀವಿಬ್ಬರು ಮಾತನಾಡಿಕೊಂಡು ಸ್ಪಷ್ಟತೆಗೆ ಬನ್ನಿ, ಯಾವುದೇ ಗೊಂದಲ ಇಟ್ಟುಕೊಂಡು ದೆಹಲಿಗೆ ಬರದಂತೆ ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ ಈ ನಿರ್ಧಾರಕ್ಕೆ ಬರಲಾಗಿದೆ.

