ಬೆಂಗಳೂರು: ದ್ವೇಷ ಭಾಷಣವನ್ನ ತಡೆಯುವ ನಿಟ್ಟಿನಲ್ಲಿ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದ್ದು, ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025ಕ್ಕೆ ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು ಎಂಟು ಮಹತ್ವದ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ.
ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ. ಪಾಟೀಲ್ ಅವರು, ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ, ಬಯಲುಸೀಮೆ ತಿದ್ದುಪಡಿ ವಿಧೇಯಕ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಧಾರ್ಮಿಕ ದತ್ತಿ ವಿಧೇಯಕ, ಜಾನುವಾರು ಹತ್ಯೆ ಪ್ರತಿಬಂಧಕ ಹತ್ಯೆ ಸಂರಕ್ಷಣೆ ವಿಧೇಯಕ, ಸಾಮಾಜಿಕಬಹಿಷ್ಕಾರ ನಿಷೇಧ ವಿಧೇಯಕ, ಘಾಟಿ ಸುಬ್ರಮಣ್ಯ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕಕ್ಕೆ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ ಎಂದರು.

