ಚಿಕ್ಕಬಳ್ಳಾಪುರ: ಲಾರಿ ಹಾಗೂ ಕೆಎಸ್‍ಆರ್‍ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಕಾಪುರ ಗೇಟ್ ಬಳಿ ನಡೆದಿದೆ.
ಅಪಘಾತದಲ್ಲಿ 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಲಾರಿ ಚಾಲಕ, ಕ್ಲೀನರ್ ಹಾಗೂ ಬಸ್ ಚಾಲಕನ ಸ್ಥಿತಿ ಗಂಭೀರವಾಗಿದ್ದು ಮೂವರನ್ನ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಹಾಗೂ ಗೌರಿಬಿದನೂರು ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಲಾರಿಯ ಬ್ರೇಕ್ ಫೇಲ್ ಆಗಿದ್ದೇ ಅಪಘಾತಕ್ಕೆ ಕಾರಣ ಅಂತ ಹೇಳಲಾಗುತ್ತಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.