ಮೈಸೂರು: ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿ ಕೊಲೆ ಬೆದರಿಕೆ ಹಾಕಲಾಗಿದೆ. ಸರ್ಕಾರದ ಸ್ವಾಧೀನಕ್ಕೆ ಪಡೆಯಬೇಕಾದ ಜಮೀನು ಪರಿಶೀಲನೆ ಮಾಡಲು ತೆರಳಿದ ಗ್ರಾಮ ಆಡಳಿತ ಮಹಿಳಾ ಅಧಿಕಾರಿ ಹಾಗೂ ಗ್ರಾಮ ಸಹಾಯಕನಿಗೆ ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ.
ಗ್ರಾಮ ಆಡಳಿತಾಧಿಕಾರಿ ಬಂಡೀಪಾಳ್ಯ ವೃತ್ತದ ಜಿ.ಭವ್ಯ, ಗ್ರಾಮ ಸಹಾಯಕ ನವೀನ್ ಕುಮಾರ್ ಅವರನ್ನು ನಿಂದಿಸಲಾಗಿದೆ. ಮೈಸೂರು ತಾಲ್ಲೂಕು ಗುಡಮಾದನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಿಎಂ ಪುಟ್ಟಸ್ವಾಮಿ ಎಂಬಾತ ಬೆದರಿಕೆ ಹಾಕಿದ ಆರೋಪಿ. ಇದನ್ನೂ ಓದಿ: ಲಕ್ಕುಂಡಿಯಲ್ಲಿ ಉತ್ಕನನ – ಪ್ರಾಚೀನ ಕಾಲದ ಶಿಲಾಕೃತಿ ಪತ್ತೆ
ಧಮ್ಕಿ ಹಾಕಿ ಕೊಲೆ ಬೆದರಿಕೆ ಹಾಕಿದ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಯಾಗಿವೆ. ಈ ವೇಳೆ ಪುಟ್ಟಸ್ವಾಮಿ ಬಲವಂತವಾಗಿ ಮೊಬೈಲ್ ಕಿತ್ತುಕೊಂಡು ವಿಡಿಯೋ ಡಿಲೀಟ್ ಮಾಡಿದ್ದಾನೆ. ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಮಾದರಿಯ ಆಸ್ಪತ್ರೆ ನಿರ್ಮಾಣ ಮಾಡಲು ಒಟ್ಟು 20 ಎಕರೆ ಸರ್ಕಾರಿ ಜಾಗ ಮೀಸಲಿಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಇದಾಗಿದೆ. ತಮ್ಮ ಸ್ವಕ್ಷೇತ್ರದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಸಿದ್ದರಾಮಯ್ಯ ಆಸಕ್ತಿ ತೋರಿದ್ದಾರೆ.
ಈ ಹಿನ್ನೆಲೆ ಜಾಗ ಗುರುತಿಸಿ ಸ್ವಾಧೀನ ಪ್ರಕ್ರಿಯೆಗೆ ಆದೇಶಿಸಿ ಜಮೀನು ಪರಿಶೀಲನೆಗೆ ಮಹಿಳಾ ಅಧಿಕಾರಿ ಜಿ.ಭವ್ಯ ಹಾಗೂ ನವೀನ್ ಕುಮಾರ್ ತೆರಳಿದ್ದರು. ಈ ವೇಳೆ ಸದರಿ ಜಮೀನಿನಲ್ಲಿ ಅನಧಿಕೃತವಾಗಿ ಅಡಿಕೆ ತೋಟ ನಿರ್ಮಿಸಿಕೊಂಡಿದ್ದ ಪುಟ್ಟಸ್ವಾಮಿ, ಯಾರನ್ನು ಕೇಳಿ ನಿಮ್ಹಾನ್ಸ್ ಆಸ್ಪತ್ರೆಗೆ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ತಹಸೀಲ್ದಾರ್ ತಲೆ ತೆಗೆಯಬೇಕು, ನಿನ್ನನ್ನ ಇಲ್ಲಿಯೇ ಕೊಂದು ಹಾಕುತ್ತೇನೆ ಎಂದು ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನೂ ಓದಿ: ಮಂಡ್ಯ: 11 ತಿಂಗಳ ಬಂಡೂರು ಕುರಿ 1.35 ಲಕ್ಷಕ್ಕೆ ಮಾರಾಟ

