ಕಾರವಾರ: ಯೂಟ್ಯೂಬ್‌ನಲ್ಲಿ ವಿಡಿಯೋ ವೈರಲ್ ಆಗಿದ್ದಕ್ಕೆ ಮನನೊಂದು ಕಾರವಾರದಲ್ಲಿನ (Karwar) ಪಿಕಳೆ ಆಸ್ಪತ್ರೆಯ ಔಷಧಿ ವಿತರಕ ರಾಜೀವ್ ಪಿಕಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣದಲ್ಲಿ ಅವಮಾನಕಾರಿ ವಿಡಿಯೋ ವೈರಲ್ ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಕಾರವಾರ ತಾಲೂಕಿನ ವೈಲವಾಡ ಗ್ರಾಮದ ನಿವಾಸಿಗಳಾದ ಸುಭಾಷ್, ಹರಿಶ್ಚಂದ್ರ ಮತ್ತು ಅನಿಲ್ ಎಂಬವರನ್ನು ಅಂಕೋಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ, ಕಾರವಾರದ ಪಿಕಳೆ ನರ್ಸಿಂಗ್ ಹೋಂನ ರಾಜೀವ್ ಪಿಕಳೆ ಅವರು ಡಬಲ್ ಬ್ಯಾರಲ್ ಗನ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದನ್ನೂ ಓದಿ: ಕಾರವಾರ| ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಔಷಧಿ ವಿತರಕ ಆತ್ಮಹತ್ಯೆ

ಪ್ರಕರಣ ಏನು?
ಸುಮಾರು ಹದಿನೈದು ದಿನಗಳ ಹಿಂದೆ ಪಿಕಳೆ ಆಸ್ಪತ್ರೆಯಲ್ಲಿ ನಡೆದ ಅವಧಿ ಮುಗಿದ ಔಷಧಿ ವಿತರಣೆ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅವಧಿ ಮೀರಿದ ಔಷಧಿ ನೀಡಲಾಗಿದೆ ಎಂದು ಪ್ರಶ್ನಿಸಿ ತೆಗೆದ ವಿಡಿಯೋವನ್ನು ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಈ ವಿಡಿಯೋ ವೈರಲ್ ಆದ ಬಳಿಕ, ರಾಜೀವ್ ಪಿಕಳೆ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದು, ಇದು ಕಣ್ತಪ್ಪಿನಿಂದ ನಡೆದ ತಪ್ಪು ಎಂದು ಸ್ಪಷ್ಟಪಡಿಸಿದ್ದರು. ಆದರೆ, ಪದೇ ಪದೇ ವಿಡಿಯೋ ವೈರಲ್ ಆಗುತ್ತಿದ್ದುದರಿಂದ ಅವರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ.
ಆತ್ಮಹತ್ಯೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಅಂಕೋಲಾ ಪೊಲೀಸರು ತನಿಖೆ ತೀವ್ರಗೊಳಿಸಿ, ವಿಡಿಯೋ ವೈರಲ್ ಮಾಡಿದ ಆರೋಪಿಗಳ ಪತ್ತೆಗೆ ಮುಂದಾಗಿದ್ದರು. ತನಿಖೆ ವೇಳೆ ಆರೋಪಿಗಳ ಪಾತ್ರ ದೃಢಪಟ್ಟ ಹಿನ್ನೆಲೆಯಲ್ಲಿ ಮೂವರನ್ನು ಬಂಧಿಸಲಾಗಿದೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಕೇಸ್; ಆರೋಪಿ ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಅರ್ಜಿ ವಜಾ

