ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಫ್ಐಆರ್ ಹಿನ್ನೆಲೆಯಲ್ಲಿ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರನ್ನು ನೇಮಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ಎಡಿಜಿಪಿ ಎಂ.ಚಂದ್ರಶೇಖರ್ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಹೆಚ್ಡಿಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯಿತು. ರಾಜಿ ಸಂಧಾನದ ಮೂಲಕ ಕೇಸ್ ಇತ್ಯರ್ಥಕ್ಕೆ ಹೈಕೋರ್ಟ್ ಸಲಹೆ ಹಿನ್ನೆಲೆಯಲ್ಲಿ ಕ್ಷಮೆಯಾಚನೆಯ ಪ್ರಮಾಣಪತ್ರ ಸಲ್ಲಿಸಬೇಕೆಂದು ಎಡಿಜಿಪಿ ಪರ ವಕೀಲರು ವಾದ ಮಂಡನೆ ಮಾಡಿದರು. ಇದಕ್ಕೆ ಹೆಚ್ಡಿಕೆ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್ಗೆ ಜಾಮೀನು
ಈ ವೇಳೆ, ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರನ್ನು ನೇಮಿಸಲು ಹೈಕೋರ್ಟ್ ಪ್ರಸ್ತಾಪ ಮಾಡಿ, ಈ ಬಗ್ಗೆ ನಿಲುವು ತಿಳಿಸಲು ಎರಡೂ ಕಡೆಯ ವಕೀಲರಿಗೆ ಸೂಚನೆ ನೀಡಿತು. ಅರ್ಜಿ ವಿಚಾರಣೆ ಮಾ.26ಕ್ಕೆ ಮುಂದೂಡಿದ ಹೈಕೋರ್ಟ್, ಅಲ್ಲಿಯವರೆಗೆ ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿದೆ.
ತನ್ನ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪ ಮಾಡಿ, ಬೆದರಿಕೆ ಹಾಕಿದ್ದಾರೆ. ನಕಲಿ ವೈದ್ಯಕೀಯ ದಾಖಲೆ ಪಡೆದು ಕರ್ನಾಟಕ ಕೇಡರ್ಗೆ ಸೇರ್ಪಡೆಗೊಂಡಿದ್ದಾರೆ ಎಂದು ಹೆಚ್ಡಿಕೆ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದರು. ಅಲ್ಲದೇ, ಲಂಚ ಸ್ವೀಕರಿಸುತ್ತಿರುವುದಾಗಿ ಆರೋಪಿಸಿದ್ದು, ಈ ಸಂಬಂಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಡಿಜಿಪಿ ಎಂ.ಚಂದ್ರಶೇಖರ್ ದೂರು ದಾಖಲಿಸಿದ್ದಾರೆ. ಈ ಪ್ರಕರಣ ರದ್ದು ಕೋರಿ ಹೆಚ್ಡಿಕೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್ ಬದಲಾವಣೆಗೆ ನಿರ್ಧಾರ: ಡಿ.ಕೆ ಶಿವಕುಮಾರ್

