ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆ(Cabinet Expansion) ಕಸರತ್ತಿನ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೊಸಬರಿಗೆ ಮಣೆ ಹಾಕುವ ಕುರಿತು ಮಹತ್ವದ ಸುಳಿವು ನೀಡಿದ್ದಾರೆ.
ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಇರುವ ತಮ್ಮ ಸರ್ಕಾರಿ ನಿವಾಸದಲ್ಲಿ ಇಂದು ದರ್ಗಾದ ಧರ್ಮಗುರುಗಳು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ಸೌಜನ್ಯಯುತ ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಆಲೋಚನೆ ನಡೆದಿರುವುದನ್ನು ಬಹಿರಂಗಪಡಿಸಿದರು.
“ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡುವ ಆಲೋಚನೆ ಪ್ರಗತಿಯಲ್ಲಿದೆ. ನಾನು ಯಾರ ಪ್ರಗತಿ ಅಥವಾ ಅವಕಾಶವನ್ನು ತಡೆಯಲು ಬಯಸುವುದಿಲ್ಲ. ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು ಎನ್ನುವುದೇ ನಮ್ಮ ಆಶಯ ಎಂದು ಡಿ.ಕೆ. ಶಿವಕುಮಾರ್ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಸಚಿವ ಸಂಪುಟ ವಿಸ್ತರಣೆಯ ಗೊಂದಲಗಳಿಗೆ ಉತ್ತರಿಸಿದ ಅವರು, ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಸಂಪೂರ್ಣ ಜವಾಬ್ದಾರಿಯನ್ನು ಪಕ್ಷದ ಹೈಕಮಾಂಡ್ ವಹಿಸಿಕೊಂಡಿದೆ. ಈಗಾಗಲೇ ನವದೆಹಲಿಯಲ್ಲಿ ಈ ಕುರಿತು ವರಿಷ್ಠರ ಮಟ್ಟದಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡೋಣ” ಎಂದು ಮಾರ್ಮಿಕವಾಗಿ ನುಡಿದರು.
ಡಿಸಿಎಂ ಅವರ ಈ ಹೇಳಿಕೆಯು ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಹೊಸ ಸಂಚಲನ ಮೂಡಿಸಿದ್ದು, ಸದ್ಯದಲ್ಲೇ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದೆಯೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿವೆ.
