– ಮುಂದಿನ ವಾರದೊಳಗೆ ನಿರ್ಧಾರ ಸಾಧ್ಯತೆ
ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿದ್ದ ನೀಟ್ (NEET) ಸಂಬಂಧಿತ ಪ್ರತಿಭಟನೆ ಸಚಿವರ ರಾಜೀನಾಮೆಯೊಂದಿಗೆ ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಮತ್ತೆ ಬಿರುಸು ಪಡೆದುಕೊಂಡಿದೆ.
ಪಕ್ಷದ ಉನ್ನತ ಮೂಲಗಳ ಪ್ರಕಾರ, ಕಾಂಗ್ರೆಸ್ ಹೈಕಮಾಂಡ್ ಮುಂದಿನ ಎರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸೋಮವಾರ (ಜು.27) ಅಥವಾ ಮಂಗಳವಾರ (ಜು.28) ದೆಹಲಿಯಲ್ಲಿ ನಡೆಯಲಿರುವ ಸಭೆಗಳ ಬಳಿಕ ಅಂತಿಮ ಚಿತ್ರಣ ಸ್ಪಷ್ಟವಾಗಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಎಲ್ಲವೂ ಅಂದುಕೊಂಡಂತೆ ನಡೆದರೆ, ಬುಧವಾರವೇ (ಜು.29) ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.
ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಮುಂದಿನ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಹೆಚ್ಚಿದೆ. ಸಚಿವ ಸ್ಥಾನಗಳ ಹಂಚಿಕೆ ಹಾಗೂ ಹೊಸ ಮುಖಗಳಿಗೆ ಅವಕಾಶ ನೀಡುವ ಬಗ್ಗೆ ಅಂತಿಮ ಹಂತದ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.
