ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ನಗರೀಕರಣದಿಂದಾಗಿ ಕೆಲವೊಮ್ಮೆ ಕಾಡುಪ್ರಾಣಿಗಳು ನಾಡಿಗೆ ಪ್ರವೇಶಿಸುತ್ತವೆ. ವಿಶೇಷವಾಗಿ ದಕ್ಷಿಣ ಬೆಂಗಳೂರು ಹಾಗೂ ಮಾಗಡಿ ರಸ್ತೆಯಂತಹ ಪ್ರದೇಶಗಳಲ್ಲಿ ಚಿರತೆಗಳು (Leopard) ಆಗಾಗ್ಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ನಿದರ್ಶನಗಳಿವೆ. ಇಂತಹ ಸಂದರ್ಭಗಳಲ್ಲಿ ಅರಣ್ಯ ಇಲಾಖೆಯು ಸ್ಥಳದಲ್ಲೇ ಬೋನುಗಳನ್ನು ಇರಿಸಿ ಪ್ರಾಣಿಗಳನ್ನು ಸೆರೆಹಿಡಿಯುವ ಕಾರ್ಯಾಚರಣೆ ನಡೆಸುತ್ತದೆ.
ಸದ್ಯ ಬನಶಂಕರಿ (Banashankari) ಸಮೀಪದ ಕರಿಯಣ್ಣಪಾಳ್ಯದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಶನಿವಾರ (ಜು.25) ಸಂಜೆ 7 ಗಂಟೆ ಸುಮಾರಿಗೆ ಚಿರತೆ ಪ್ರತ್ಯಕ್ಷವಾಗಿದೆ. ಇದನ್ನ ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇತ್ತೀಚೆಗಷ್ಟೇ ಬ್ಯಾಡ್ರಹಳ್ಳಿ ಪೊಲೀಸ್ ಠಾಣಾ (Byadarahalli Police Station) ವ್ಯಾಪ್ತಿಯ ಬಿಇಎಲ್ ಲೇಔಟ್ ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಚಿರತೆ ಓಡಾಡಿದ್ದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದೀಗ ಬನಶಂಕರಿ ಸಮೀಪ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
