ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ(Parappana Agrahara) ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸೆಲ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ.
ಮಂಗಳವಾರ ಸಿಸಿಬಿ (CCB) ಅಧಿಕಾರಿಗಳು ನಡೆಸಿದ ದಿಢೀರ್ ಪರಿಶೀಲನೆ ವೇಳೆ ಈ ವಿಚಾರ ಬೆಳಕಿಗೆ ಬಂದಿದ್ದು, ಜೈಲಿನಲ್ಲಿ ವಿಐಪಿ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಮತ್ತೆ ಪುಷ್ಟಿ ನೀಡಿದೆ.
ಮಂಗಳವಾರ ಮಧ್ಯಾಹ್ನ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲು ಸಂಕೀರ್ಣದ ಮೇಲೆ ದಿಢೀರ್ ಪರಿಶೀಲನೆ ನಡೆಸಿದಾಗ, ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಆಂಡ್ರಾಯ್ಡ್ ಮೊಬೈಲ್(Mobile Phone) ಪತ್ತೆಯಾಗಿದೆ. ಇದನ್ನೂ ಓದಿ: ಪ್ರಕಾಶ್ ರಾಜ್ 4 ವರ್ಷದಿಂದ ವಿಳಾಸದಲ್ಲಿ ನೆಲೆಸಿಲ್ಲ, ಎಸ್‌ಐಆರ್ ಆರೋಪ ಸತ್ಯಕ್ಕೆ ದೂರ: ಕೇಂದ್ರ ನಗರ ಪಾಲಿಕೆ ಸ್ಪಷ್ಟನೆ

ಜೈಲಿನೊಳಗೆ ನಿಷೇಧಿತ ಮೊಬೈಲ್ ಸಾಧನ ಹೇಗೆ ತಲುಪಿತು ಎಂಬುದರ ಕುರಿತು ಸಮಗ್ರ ತನಿಖೆ ನಡೆಸಲು ಪೊಲೀಸರು ನಿರ್ಧರಿಸಿದ್ದು, ಸಂಬಂಧಪಟ್ಟ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬ್ಯಾರಕ್‌ನಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ರೈ ಎಂಬ ಮತ್ತೊಬ್ಬ ಸಜಾಬಂಧಿ ಮಾತ್ರ ವಾಸವಿದ್ದರು. ತಪಾಸಣೆ ವೇಳೆ ಮೊಬೈಲ್ ಸಿಕ್ಕಾಗ ಪ್ರಜ್ವಲ್ ರೇವಣ್ಣ ಏನೂ ತಿಳಿಯದಂತೆ ತಟಸ್ಥರಾಗಿದ್ದರು ಎನ್ನಲಾಗಿದೆ.
ಪ್ರತಾಪ್ ರೈ ಎ1 ಹಾಗೂ ಪ್ರಜ್ವಲ್ ರೇವಣ್ಣ ಎ2 ಆರೋಪಿಯನ್ನಾಗಿ ಮಾಡಲಾಗಿದೆ. ಈ ನಿಷೇಧಿತ ವಸ್ತುಗಳನ್ನು ಪ್ರಜ್ವಲ್ ರೇವಣ್ಣ ಬಳಸುತ್ತಿದ್ದರೇ ಅಥವಾ ಪ್ರತಾಪ್ ರೈ ಬಳಸುತ್ತಿದ್ದನೇ ಎಂಬ ಬಗ್ಗೆ ಸಿಸಿಬಿ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ.
ಅತ್ಯಂತ ಬಿಗಿ ಭದ್ರತೆ ಹೊಂದಿರುವ ಕೇಂದ್ರ ಕಾರಾಗೃಹದಲ್ಲಿ ಹೈಪ್ರೊಫೈಲ್ ಕೈದಿಯೊಬ್ಬರ ಬಳಿ ಮೊಬೈಲ್ ಫೋನ್ ಪತ್ತೆಯಾಗಿರುವುದು ಕಾರಾಗೃಹದ ಭದ್ರತಾ ವ್ಯವಸ್ಥೆಯ ಮೇಲೆಯೇ ಸಾಲು ಸಾಲು ಪ್ರಶ್ನೆಗಳನ್ನು ಎತ್ತಿದೆ. ಈ ಹಿಂದೆ ಕೂಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಭಾವಿ ಕೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು.
ಹಾಸನ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ 36 ವರ್ಷದ ಪ್ರಜ್ವಲ್ ರೇವಣ್ಣ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

