ನವದೆಹಲಿ: ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಒಪ್ಪಿಕೊಂಡಿದ್ದರಿಂದ ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಮಂಗಳವಾರ ಸುಪ್ರೀಂ ಕೋರ್ಟ್‌ಗೆ (Supreme Court) ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲಾ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠದ ಮುಂದೆ ಹಾಜರಾದ ಸಿಜೆಪಿ ವಕ್ತಾರ ಸೌರವ್ ದಾಸ್, ಪಕ್ಷದ ಅಧಿಕೃತ ಹೇಳಿಕೆಯನ್ನು ಓದಿ ಈ ವಿಷಯವನ್ನು ಸ್ಪಷ್ಟಪಡಿಸಿದರು.
ವಿಚಾರಣೆ ವೇಳೆ ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಮಾತುಕತೆಯ ವಿವರಗಳನ್ನು ನ್ಯಾಯಪೀಠಕ್ಕೆ ವಿವರಿಸಿದ ಮೆಹ್ತಾ ಈ ಸಂಬಂಧ ಐದು ಅರ್ಜಿಗಳನ್ನು ಸಲ್ಲಿಸಿರುವುದಾಗಿ ತಿಳಿಸಿದರು.
ಅಪರಾಧ ಹಿನ್ನೆಲೆ ಹೊಂದಿರುವ 2,873 ವ್ಯಕ್ತಿಗಳ ವಿವರಗಳನ್ನು ಒಳಗೊಂಡ ದೆಹಲಿ ಪೊಲೀಸ್ (Delhi Police) ಅರ್ಜಿಯನ್ನು ಉಲ್ಲೇಖಿಸಿದ ಅವರು, ಅಂತಹ ಕಿಡಿಗೇಡಿಗಳ ವಿರುದ್ಧ ಹೊಸದಾಗಿ ಎಫ್‌ಐಆರ್ (FIR) ದಾಖಲಿಸಲಾಗುವುದು ಎಂದರು.
ಈ ವಿಷಯಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳು ಕೂಡ ಅರ್ಜಿ ಸಲ್ಲಿಸಿವೆ ಎಂದು ಮಾಹಿತಿ ನೀಡಿದರು. ಮೃತಪಟ್ಟ ನೀಟ್ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಮಾತನಾಡಿದ ಅವರು, ಸರ್ಕಾರ ಪರಿಹಾರ ನೀಡಲು ಬದ್ಧವಾಗಿದೆ, ಆದರೆ ಅದರ ಪ್ರಕ್ರಿಯೆ ಮತ್ತು ನಿಯಮಗಳ ಕುರಿತು ಚರ್ಚಿಸಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ – ಮಾಫಿ ಸಾಕ್ಷಿ ಕ್ರಮಕ್ಕೆ ಹೈಕೋರ್ಟ್ ಮೊರೆ ಹೋದ ದರ್ಶನ್
ಸೋಮವಾರ ಈ ಮನವಿಯನ್ನು ನಿರಾಕರಿಸಿದ್ದ ಸುಪ್ರೀಂ ಕೋರ್ಟ್, ಪ್ರತಿಭಟನೆಯಿಂದ ಅಹಿತಕರ ಘಟನೆ ನಡೆಯುತ್ತದೆ ಎಂದು ಊಹಿಸಲು ಯಾವುದೇ ಬಲವಾದ ಕಾರಣಗಳಿಲ್ಲ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಹಾಗೂ ಪೊಲೀಸರ ಜವಾಬ್ದಾರಿ ಎಂದು ಹೇಳಿತ್ತು.
ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಜುಲೈನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಭರವಸೆಯನ್ನು ಕೇಂದ್ರ ಈಡೇರಿಸಿಲ್ಲ ಎಂದು ಆರೋಪಿಸಿ ಸಿಜೆಪಿ ಸೆಪ್ಟೆಂಬರ್ 5ರಂದು ದೆಹಲಿ ಚಲೋಗೆ(Delhi Chalo) ಕರೆ ನೀಡಿತ್ತು.
