ಶಿವಮೊಗ್ಗ: ಕರಾವಳಿಯ ಪ್ರತಿ ಕ್ಷೇತ್ರಕ್ಕೆ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ (Shivamogga) ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಂಗಳೂರು ಭೇಟಿಯನ್ನ ಉಲ್ಲೇಖಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಡಿಕೆಶಿ ಅವರು ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಕರಾವಳಿ (Karavali) ಭಾಗಕ್ಕೆ ಸರ್ಕಾರದ ಕೊಡುಗೆ ಶೂನ್ಯವಾಗಿದೆ ಎಂದು ಕುಟುಕಿದರು.
ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಕರಾವಳಿ ಭಾಗಕ್ಕೆ 15 ಸಾವಿರದಿಂದ 20 ಸಾವಿರ ಕೋಟಿ ರೂ. ಅನುದಾನ ನೀಡಲಾಗಿತ್ತು. ಆದರೆ, ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಂಗಳೂರಿಗೆ ಒಂದು ಬಿಡಿಗಾಸನ್ನೂ ನೀಡಿಲ್ಲ. ಆದ್ದರಿಂದ ಕರಾವಳಿ ಭಾಗದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಬೇಕಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 200 ಕೋಟಿ ರೂ. ಅನುದಾನ ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇದ್ದು, ರೈತರಿಗೆ 8 ರಿಂದ 10 ಗಂಟೆ ವಿದ್ಯುತ್ ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಕಸ್ತೂರಿ ರಂಗನ್ ವರದಿ ವಿಚಾರದಲ್ಲೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ವಿಜಯೇಂದ್ರ, ಈ ಕುರಿತು ವಿಶೇಷ ಅಧಿವೇಶನದಲ್ಲಿ ಚರ್ಚಿಸುವುದಾಗಿ ತಿಳಿಸಿದರು.
ಇದೇ ವೇಳೆ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನ ಪಾಪದ ಕೊಡ ತುಂಬಿದೆ. ಇದೇ ರೀತಿ ಮುಂದುವರಿದರೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

