– ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ
– ಕೇಂದ್ರದ ಮಾರ್ಗಸೂಚಿಯಂತೆಯೇ ಬರ ಘೋಷಣೆ
ಬೆಂಗಳೂರು: ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದಲ್ಲಿ ಉಂಟಾಗಿರುವ ಗಂಭೀರ ಬರ ಪರಿಸ್ಥಿತಿಯ ಕುರಿತು ವಿಧಾನಮಂಡಲದಲ್ಲಿ ಪಕ್ಷಾತೀತವಾಗಿ ಸಮಗ್ರ ಚರ್ಚೆ ನಡೆಸಿ, ರಾಜ್ಯದ ಹಿತಾಸಕ್ತಿಗೆ ಪೂರಕವಾದ ಒಮ್ಮತದ ನಿರ್ಣಯ ಕೈಗೊಳ್ಳಬೇಕಿದೆ ಎಂದು ಉಪಮುಖ್ಯಮಂತ್ರಿ, ಕಂದಾಯ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ವಿಧಾನಪರಿಷತ್‌ನಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಯ 7ನೇ ಕರಡು ಪ್ರತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನಿಗದಿತ ಅವಧಿಯೊಳಗೆ ತನ್ನ ಅಭಿಪ್ರಾಯವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಿದೆ. ಸರ್ಕಾರದ ಅಭಿಪ್ರಾಯವನ್ನಷ್ಟೇ ಏಕಪಕ್ಷೀಯವಾಗಿ ಸಲ್ಲಿಸುವ ಬದಲು, ಸದನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಮುಕ್ತವಾಗಿ ಚರ್ಚಿಸಿ, ರಾಜ್ಯದ ಹಿತದೃಷ್ಟಿಯಿಂದ ಒಮ್ಮತದ ನಿಲುವನ್ನು ಕೇಂದ್ರಕ್ಕೆ ತಿಳಿಸುವುದು ಸೂಕ್ತ ಎಂಬ ಉದ್ದೇಶದಿಂದ ಈ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತಕ್ಕೆ 2 ರನ್ ರೋಚಕ ಜಯ – 16 ರನ್ ಹೊಡೆದ ಅಯ್ಯರ್‌ಗೆ ಪಂದ್ಯಶ್ರೇಷ್ಠ
ರಾಜ್ಯಾದ್ಯಂತ ಗಂಭೀರ ಬರ ಪರಿಸ್ಥಿತಿ:
ರಾಜ್ಯದಲ್ಲಿ ಈ ಬಾರಿ ಬರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಇದು ಕೆಲವೇ ತಾಲೂಕುಗಳಿಗೆ ಸೀಮಿತವಾಗಿಲ್ಲ. ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರ ಕೊರತೆ ಕಂಡುಬಂದಿದ್ದು, ಕೃಷಿ ಚಟುವಟಿಕೆ ಮತ್ತು ರೈತರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ವಿವರಿಸಿದರು.
ಹಿಂದಿನ ತೀವ್ರ ಬರ ಪರಿಸ್ಥಿತಿಗಳೊಂದಿಗೆ ಈ ವರ್ಷದ ಅಂಕಿ-ಅಂಶಗಳನ್ನು ಹೋಲಿಕೆ ಮಾಡಲಾಗುತ್ತಿದ್ದು, ಪ್ರಸ್ತುತ ಪರಿಸ್ಥಿತಿಯ ತೀವ್ರತೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೆಸಿಫಿಕ್ ಸಾಗರದ ಮೇಲ್ಮೈ ನೀರಿನ ತಾಪಮಾನ ಹೆಚ್ಚಳದಿಂದ ಉಂಟಾಗುವ ಎಲ್ ನಿನೋ ಪ್ರಕ್ರಿಯೆಯೂ ಮಳೆ ಕೊರತೆಗೆ ಕಾರಣವಾಗಿದ್ದು, ಈ ಬಾರಿ ಅದರ ತೀವ್ರತೆ ಹೆಚ್ಚಿದೆ ಎಂದರು.
ರಾಜ್ಯದಲ್ಲಿ ವಾಡಿಕೆಯಂತೆ ಸುಮಾರು 852 ಮಿ.ಮೀ. ಮಳೆಯಾಗಬೇಕಿತ್ತು, ಆದರೆ 642 ಮಿ.ಮೀ. ಮಳೆಯಷ್ಟೇ ದಾಖಲಾಗಿದೆ. ಜೂನ್‌ನಿಂದ ಸೆಪ್ಟೆಂಬರ್ 26ರವರೆಗಿನ ಅವಧಿಯಲ್ಲಿ ವಿವಿಧ ಪ್ರದೇಶಗಳಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ ಎಂದು ಸದನದ ಗಮನಕ್ಕೆ ತಂದರು.
ರಾಜ್ಯದ ಸರಾಸರಿ ಮಳೆ ಕೊರತೆ ಶೇ.36ರಷ್ಟಿದ್ದು, ದಕ್ಷಿಣ ಒಳನಾಡಿನಲ್ಲಿ ಶೇ.46, ಉತ್ತರ ಒಳನಾಡಿನಲ್ಲಿ ಶೇ.44, ಮಲೆನಾಡಿನಲ್ಲಿ ಶೇ.38 ಹಾಗೂ ಕರಾವಳಿ ಭಾಗದಲ್ಲಿ ಶೇ.28ರಷ್ಟು ಮಳೆ ಕೊರತೆ ದಾಖಲಾಗಿದೆ ಎಂದು ವಿವರಿಸಿದರು.
ಮಳೆ ಆರಂಭವಾದ ಸಂದರ್ಭದಲ್ಲಿ ರೈತರು ಬಿತ್ತನೆ ಕೈಗೊಂಡಿದ್ದರು. ಆದರೆ ಕೆಲವೇ ದಿನಗಳಲ್ಲಿ ಮಳೆ ಕೈಕೊಟ್ಟ ಪರಿಣಾಮ ಮೊಳಕೆಯೊಡೆದ ಬೆಳೆಗಳು ಒಣಗಿವೆ. ನಂತರ ಮಳೆಯಾದಾಗ ಎರಡನೇ ಬಾರಿ ಬಿತ್ತನೆ ಮಾಡಿದ ಬೆಳೆಗಳಿಗೂ ಹಾನಿಯಾಗಿದೆ. ಹಲವು ಪ್ರದೇಶಗಳಲ್ಲಿ ಬೆಳೆ ಹಾನಿ ತೀವ್ರವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಹಿಂಸೆ ತಡೆಯೋಕಾಗ್ತಿಲ್ಲ, ಒಂದು ತೊಟ್ಟು ವಿಷ ಕೊಡಿ ಅಂತಾರೆ – ಪವಿತ್ರಾಗೌಡ ಪರ ವಕೀಲರ ಪ್ರಬಲ ವಾದ
177 ತಾಲೂಕುಗಳು ಬರಪೀಡಿತ ಪಟ್ಟಿಗೆ:
ಕೇಂದ್ರ ಸರ್ಕಾರವು 2020ರಲ್ಲಿ ರೂಪಿಸಿರುವ ಬರ ಘೋಷಣೆಯ ಮಾರ್ಗಸೂಚಿಗಳ ಪ್ರಕಾರವೇ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕಾಗುತ್ತದೆ. ಆ ಮಾನದಂಡಗಳನ್ನು ಅನುಸರಿಸಿ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ನಿರಂತರ ಪರಿಶೀಲನೆಯ ಬಳಿಕ ಮತ್ತೂ 23 ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದ್ದು, ಇದೀಗ ಮತ್ತೆ 53 ತಾಲೂಕುಗಳನ್ನು ಪಟ್ಟಿಗೆ ಸೇರಿಸಲಾಗುತ್ತಿದೆ. ಇದರೊಂದಿಗೆ ಒಟ್ಟು 177 ತಾಲೂಕುಗಳು ಬರಪೀಡಿತ ಪ್ರದೇಶಗಳಾಗಿ ಘೋಷಣೆಯಾಗಲಿವೆ ಎಂದು ತಿಳಿಸಿದರು. ಇದನ್ನೂ ಓದಿ: ವಿಧಾನಸೌಧ ಡಿಸಿಪಿ ಯೋಗೇಶ್ ಮೇಲೆ ಸಿದ್ದರಾಮಯ್ಯ ಗರಂ
ಇಷ್ಟಕ್ಕೇ ಪ್ರಕ್ರಿಯೆ ಮುಗಿಯುವುದಿಲ್ಲ. ನೆಲಮಟ್ಟದ ಪರಿಸ್ಥಿತಿ, ಮಳೆ ಕೊರತೆ, ಬೆಳೆ ಹಾನಿ ಸೇರಿದಂತೆ ನಿಗದಿತ ಮಾನದಂಡಗಳ ಆಧಾರದಲ್ಲಿ ನಿರಂತರ ಮೌಲ್ಯಮಾಪನ ನಡೆಸಲಾಗುವುದು. ಮುಂದಿನ ಹಂತದಲ್ಲಿ ಮತ್ತಷ್ಟು ತಾಲೂಕುಗಳು ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದ್ದು, ಬರಪೀಡಿತ ತಾಲೂಕುಗಳ ಸಂಖ್ಯೆ ಸುಮಾರು 200ರವರೆಗೆ ತಲುಪಬಹುದು ಎಂದು ಹೇಳಿದರು. ಇದನ್ನೂ ಓದಿ: SIM ಕಾರ್ಡ್ ದುರ್ಬಳಕೆ ಮಾಡಿದ್ರೆ 50 ಲಕ್ಷ ದಂಡ, 3 ವರ್ಷ ಜೈಲು – ನೀವು ತಿಳಿಯಬೇಕಾಗಿದ್ದು ಏನು?
ಕೇಂದ್ರ ಸರ್ಕಾರವೇ ಬರ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಮಾನದಂಡಗಳನ್ನು ರೂಪಿಸಿರುವುದರಿಂದ, ರಾಜ್ಯ ಸರ್ಕಾರವು ಆ ನಿಯಮಗಳ ಚೌಕಟ್ಟಿನಲ್ಲಿಯೇ ಕ್ರಮ ಕೈಗೊಳ್ಳಬೇಕಾಗಿದೆ. ಮಾನದಂಡಗಳನ್ನು ಮೀರಿ ರಾಜ್ಯದ ಎಲ್ಲ ತಾಲೂಕುಗಳನ್ನು ಏಕಾಏಕಿ ಬರಪೀಡಿತ ಎಂದು ಘೋಷಿಸಿದರೆ ಕೇಂದ್ರದಿಂದ ಪರಿಹಾರ ಪಡೆಯುವ ಪ್ರಕ್ರಿಯೆಗೆ ತೊಡಕು ಉಂಟಾಗಬಹುದು ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನ – ಮಹಿಳಾ ಕ್ರಿಕೆಟ್ ತಂಡಕ್ಕೆ ಸತತ 2ನೇ ಪದಕ
ಕೇಂದ್ರ ಸರ್ಕಾರ ರೂಪಿಸಿರುವ ನಿಯಮಗಳ ಪ್ರಕಾರವೇ ನಾವು ನಡೆದುಕೊಳ್ಳುತ್ತಿದ್ದೇವೆ. ಆ ನಿಯಮಗಳಡಿ ರಾಜ್ಯಕ್ಕೆ ದೊರೆಯಬೇಕಾದ ಬರ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಬೇಕು. ಅದೇ ವೇಳೆ ರಾಜ್ಯ ಸರ್ಕಾರವೂ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯದೆ, ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ ರೈತರಿಗೆ ಪರಿಹಾರ ತಲುಪಿಸುವ ಕೆಲಸ ಮಾಡಲಿದೆ ಎಂದು ಹೇಳಿದರು. ಇದನ್ನೂ ಓದಿ: ‘ವಂದೇ ಮಾತರಂ’ 2 ಚರಣ ಹಾಡುವ ರಾಜ್ಯ ಸರ್ಕಾರ ಆದೇಶ ಪ್ರಶ್ನಿಸಿ ಅರ್ಜಿ; ವಿಚಾರಣೆ 3 ವಾರ ಮುಂದೂಡಿಕೆ
ಕಸ್ತೂರಿ ರಂಗನ್ ವರದಿ ಮತ್ತು ಬರಗಾಲ ಎರಡೂ ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಮಹತ್ವದ ವಿಷಯಗಳಾಗಿವೆ. ಹೀಗಾಗಿ ಆಡಳಿತ ಮತ್ತು ವಿರೋಧ ಪಕ್ಷಗಳು ಪಕ್ಷಭೇದ ಮರೆತು ಸದನದಲ್ಲಿ ಸಮಗ್ರವಾಗಿ ಚರ್ಚಿಸಿ, ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಒಗ್ಗಟ್ಟಿನ ನಿಲುವನ್ನು ಕೇಂದ್ರ ಸರ್ಕಾರದ ಮುಂದೆ ಮಂಡಿಸಬೇಕಿದೆ ಎಂದು ಎಂದು ಸದನಕ್ಕೆ ಮನವಿ ಮಾಡಿದರು. ಇದನ್ನೂ ಓದಿ: ರಸ್ತೆ ದಾಟುವಾಗ ಕಾರು ಡಿಕ್ಕಿ – ನೇಮಕಾತಿ ಪತ್ರ ಪಡೆಯಲು ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿ ಸಾವು

