ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ (Karnataka Govt) ಹೊರಡಿಸಿದ್ದ ಆದೇಶಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ನಾಲ್ಕು ಪುಟಗಳ ಪತ್ರ ಬರೆದಿದ್ದಾರೆ.
ಪತ್ರದಲ್ಲಿ, ರಾಜ್ಯ ಸರ್ಕಾರದ ಈ ನಿರ್ಧಾರವು ಕೇಂದ್ರ ಗೃಹ ಸಚಿವಾಲಯದ ಮಾರ್ಗದರ್ಶಿ ಸೂತ್ರಗಳಿಗೆ ಮತ್ತು `ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ (ತಿದ್ದುಪಡಿ) ಕಾಯ್ದೆ, 2026’ರ ನಿಯಮಗಳಿಗೆ ವಿರುದ್ಧವಾಗಿದೆ ಎಂದು ರಾಜ್ಯಪಾಲರು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ‘ವಂದೇ ಮಾತರಂ’ 2 ಚರಣ ಹಾಡುವ ರಾಜ್ಯ ಸರ್ಕಾರ ಆದೇಶ ಪ್ರಶ್ನಿಸಿ ಅರ್ಜಿ; ವಿಚಾರಣೆ 3 ವಾರ ಮುಂದೂಡಿಕೆ
ಸಂವಿಧಾನದ ವಿಧಿ 162, 256 ಮತ್ತು 257(1)ರ ಪ್ರಕಾರ ರಾಜ್ಯಗಳು ಕೇಂದ್ರದ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಯಾವುದೇ ಪ್ರತ್ಯೇಕ ನಿರ್ಧಾರ ತೆಗೆದುಕೊಳ್ಳುವುದು ಸಂವಿಧಾನಾತ್ಮಕ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ರಾಷ್ಟ್ರೀಯ ಸಂಕೇತಗಳ ವಿಷಯದಲ್ಲಿ ಏಕರೂಪತೆ ಮತ್ತು ಗೌರವವನ್ನು ಕಾಯ್ದುಕೊಳ್ಳಬೇಕು. ಈ ವಿಷಯದಲ್ಲಿ ಅನಗತ್ಯ ಕಾನೂನು ತೊಡಕುಗಳನ್ನು ತಪ್ಪಿಸಲು ಕೇಂದ್ರ ಸರ್ಕಾರದ ಪ್ರಸ್ತುತ ನೀತಿಯನ್ನೇ ಅನುಸರಿಸಬೇಕು ಎಂದು ಸಲಹೆ ನೀಡಿದ್ದಾರೆ.
ರಾಜ್ಯ ಸರ್ಕಾರ ಸೆಪ್ಟೆಂಬರ್ 8ರಂದು ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಆದೇಶಕ್ಕೆ ಹೊರಡಿಸಿತ್ತು. ಇದನ್ನೂ ಓದಿ: ಬಿಜೆಪಿ ನಾಯಕರನ್ನ ರಣಹದ್ದು ಎಂದ ಸಚಿವ ಯತೀಂದ್ರ ವಿರುದ್ಧ ದೂರು

