ಚಿಕ್ಕೋಡಿ: ಲೈಂಗಿಕ ಕಿರುಕುಳ(Sexual Harassment) ನೀಡುತ್ತಿದ್ದ ವ್ಯಕ್ತಿಯನ್ನು ಮಹಿಳೆಯೊಬ್ಬಳು ತನ್ನ ಶಾಲಾ ಗೆಳೆಯನೊಂದಿಗೆ ಸೇರಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ(Athani) ತಾಲೂಕಿನ ಬಳ್ಳಿಗೇರಿಯಲ್ಲಿ ನಡೆದಿದೆ.
ಸೆಪ್ಟೆಂಬರ್ 21ರಂದು ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನನ್ನು ರಣವೀರ ರಜಪೂತ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಶ್ರೀದೇವಿ ರಜಪೂತ ಹಾಗೂ ಬೈರು ಪವಾರ್ ಎಂಬ ಇಬ್ಬರನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಶ್ರೀದೇವಿಗೆ ರಣವೀರ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸೆ.21ರ ರಾತ್ರಿ ಬೈಕ್ ಸ್ಟಾರ್ಟ್ ಆಗುತ್ತಿಲ್ಲ ಎಂದು ಹೇಳಿ ರಣವೀರನನ್ನು ಬೈರು ಕರೆಸಿಕೊಂಡಿದ್ದಾನೆ. ಬಳಿಕ ಆತನ ಕುತ್ತಿಗೆ ಹಿಸುಕಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಹತ್ಯೆಯ ಬಳಿಕ ಬೈರು, ಶ್ರೀದೇವಿಗೆ ಕರೆ ಮಾಡಿದ್ದ ಎನ್ನಲಾಗಿದೆ. ಪ್ರಕರಣದ ತನಿಖೆ ನಡೆಸಿದ ಅಥಣಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

