ಚಿಕ್ಕೋಡಿ: ಟಿಪ್ಪರ್‌ಗೆ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಮೃತಪಟ್ಟಿದ್ದು, 12 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಅಪಘಾತದಲ್ಲಿ ಬಸ್ ಚಾಲಕ ಸಂಗಪ್ಪ ತಳವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಚಾಲಕ ಗದಗ ಜಿಲ್ಲೆಯ ರೋಣ ತಾಲೂಕಿನ ಸವದಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.
ಗಂಗಾವತಿಯಿಂದ ಬೆಳಗಾವಿ ಮಾರ್ಗವಾಗಿ ಕೊಲ್ಲಾಪುರಕ್ಕೆ ತೆರಳುತ್ತಿದ್ದ ಬಸ್ ಸಂಕೇಶ್ವರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಾಗುತ್ತಿದ್ದ ವೇಳೆ ಟಿಪ್ಪರ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ 12 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನ ತಕ್ಷಣವೇ ಸಂಕೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಕೆಲವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಬಸ್ ಗಂಗಾವತಿ–ಕೊಲ್ಲಾಪುರ ಮಾರ್ಗದಲ್ಲಿ ಸಂಚರಿಸುವ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್. ಸಂಕೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ಪ್ರಗತಿಯಲ್ಲಿದೆ.

