ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಬಿಜೆಪಿ ಸಂಸದರು ಮುಂದಾಗಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಗ್ರಹಿಸಿದ್ದಾರೆ.
ಕಬ್ಬು ಬೆಳೆಗಾರರ ಹೋರಾಟದ ಕುರಿತು ಪ್ರತಿಕ್ರಿಯಿಸಿದ ಅವರು, ರೈತರು ಹೋರಾಟ ಮಾಡಲಿ, ಆದರೆ ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ರೈತರಿಗೆ ಮನವಿ ಮಾಡುತ್ತೇನೆ. ನಿಮ್ಮ ಕಷ್ಟಕ್ಕೆ ರಾಜ್ಯ ಸರ್ಕಾರ ಇದೆ. ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪಾತ್ರ ಮುಖ್ಯವಾಗಿದೆ. ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದರೂ ಜೋಶಿ ಅವರು ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.
ಹುಬ್ಬಳ್ಳಿಯಲ್ಲಿ ಸಣ್ಣ ಸಮಸ್ಯೆಯಾದರೂ ಅದನ್ನು ದೇಶದ ಸಮಸ್ಯೆ ಎಂಬಂತೆ ಮಾತನಾಡುತ್ತಾರೆ. ಪ್ರತಿದಿನ ಸಿಎಂ, ಸಿದ್ದರಾಮಯ್ಯ ಮತ್ತು ನನ್ನ ಬಗ್ಗೆ ಮಾತನಾಡುತ್ತಾರೆ. ಆದರೆ ರೈತರು ಇಂದು ಬೀದಿಗಿಳಿದಿದ್ದಾರೆ. ಜೋಶಿ ಅವರೇ, ನೀವು ಎಲ್ಲಿ ಮಾಯವಾಗಿದ್ದೀರಿ ಎಂದು ಪ್ರಶ್ನಿಸಿದರು.
ರೈತರ ಬೇಡಿಕೆಗಳ ಕುರಿತು ಮಾತನಾಡಲು ಫೋನ್ ಮಾಡಿದರೂ ಸಂಪರ್ಕಕ್ಕೆ ಸಿಗುತ್ತಿಲ್ಲ. ಕೇಂದ್ರ ಸಚಿವರು ರೈತರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.ಇದನ್ನೂ ಓದಿ: ಮತ್ತೆ 9 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ – ಒಟ್ಟು ಸಂಖ್ಯೆ 226ಕ್ಕೆ ಏರಿಕೆ: ಡಿಸಿಎಂ
ಕಬ್ಬಿನ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಮತ್ತು ನ್ಯಾಯಯುತ ಹಾಗೂ ಲಾಭದಾಯಕ ಬೆಲೆ (ಎಫ್ಆರ್ಪಿ) ನಿರ್ಧರಿಸುವುದು ಕೇಂದ್ರ ಸರ್ಕಾರ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಕಳೆದ ಬಾರಿ ರಾಜ್ಯ ಸರ್ಕಾರ ಸಹಕಾರ ನೀಡಿತ್ತು. ಆದರೆ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರೈತರಿಗಾಗಿ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ವಿಕಸಿತ ಭಾರತದ ಹೆಸರಿನಲ್ಲಿ ರೈತರನ್ನು ಬೀದಿಗಿಳಿಯುವ ಪರಿಸ್ಥಿತಿಗೆ ತಳ್ಳಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಬಿಜೆಪಿ ಸಂಸದರು ಕಬ್ಬು ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: ಸ್ಟಿಂಗ್ ಆಪರೇಷನ್ ಮಾಡಿರೋರನ್ನ ಬಲಿ ಹಾಕಬೇಕು: ಎಂ.ಬಿ ಪಾಟೀಲ್

