ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಅವರ ತಂದೆಯ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೀಡಿರುವ ಹೇಳಿಕೆಯನ್ನು ಖಂಡಿಸಿ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ (BJP) ನಿರ್ಧರಿಸಿದೆ.
ಬಿಹಾರದ ಮೊದಲ ಮುಖ್ಯಮಂತ್ರಿ ಶ್ರೀಕೃಷ್ಣ ಸಿಂಗ್ ಅವರ ಜನ್ಮದಿನಾಚರಣೆ ಅಂಗವಾಗಿ ಭಾನುವಾರ ಪಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಭಿಕರೊಬ್ಬರು `ಪ್ರಧಾನಿ ಎಲ್ಲಿಗೂ ಹೋಗುವುದಿಲ್ಲ’ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, `ಮೋದಿ ಕಾ ಬಾಪ್ ಭೀ ಜಾಯೇಗಾ’ (ಮೋದಿ ಅಪ್ಪನೂ ಹೋಗಬೇಕು) ಎಂದು ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿ ಅವರ ದಿವಂಗತ ತಂದೆಯ ಬಗ್ಗೆ ಖರ್ಗೆ ನೀಡಿದ ಅವಮಾನಕರ, ಅಸಭ್ಯ ಮತ್ತು ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ದೇಶದ ಎಲ್ಲ ರಾಜ್ಯಗಳ ರಾಜಧಾನಿಗಳಲ್ಲಿ ಇಂದು ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ತಿಳಿಸಿದೆ. ಇದನ್ನೂ ಓದಿ: ಜಮ್ಮುವಿನಲ್ಲಿ ಭೀಕರ ಅಗ್ನಿ ಅವಘಡ – 35ಕ್ಕೂ ಹೆಚ್ಚು ಅಂಗಡಿಗಳು, ಹೋಟೆಲ್ ಭಸ್ಮ
ಬಿಜೆಪಿ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, ದೇಶದ ಎಲ್ಲ ರಾಜ್ಯಗಳ ಪಕ್ಷದ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ. ಪಾಟ್ನಾದಲ್ಲಿ ಖರ್ಗೆ ನೀಡಿದ ಹೇಳಿಕೆ ಆಕ್ಷೇಪಾರ್ಹವಾಗಿದ್ದು, ಪ್ರಧಾನಿ ಕುಟುಂಬದ ಗೌರವಕ್ಕೆ ಧಕ್ಕೆ ತರುವಂತಿದೆ ಎಂದು ಬಿಜೆಪಿ ಆರೋಪಿಸಿದೆ. ಇದನ್ನೂ ಓದಿ: ಸಿಎಂ ಭೇಟಿ ದಿನವೇ ಅಹೋರಾತ್ರಿ ಧರಣಿ ಆರಂಭಿಸಿದ ಕಬ್ಬು ಬೆಳೆಗಾರರು
ರಾಜಕೀಯ ನಾಯಕರು ಆಡಳಿತ ಮತ್ತು ನೀತಿಗಳ ಬಗ್ಗೆ ಟೀಕೆ ಮಾಡುವ ಬದಲು ಕುಟುಂಬದ ಸದಸ್ಯರನ್ನು ವೈಯಕ್ತಿಕವಾಗಿ ಗುರಿಯಾಗಿಸುವುದು ಸರಿಯಲ್ಲ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಘಟಕಗಳಿಗೆ ಪ್ರತಿಭಟನೆ ಆಯೋಜಿಸುವಂತೆ ಬಿಜೆಪಿ ಸೂಚನೆ ನೀಡಿದೆ. ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ಇಂದು ಯುದ್ಧಗಳು ಕೇವಲ ಶಸ್ತ್ರಾಸ್ತ್ರಗಳಿಂದ ನಡೆಯೋದಿಲ್ಲ – ʻಸೈಬರ್ ಭಯೋತ್ಪಾದನೆʼ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ
ಪ್ರಧಾನಿ ಮೋದಿ ಅವರ ಕುರಿತು ನೀಡಿದ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಬೇಷರತ್ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಪರಸ್ಪರ ಗೌರವ ಮತ್ತು ಸಭ್ಯತೆಯನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮೋದಿ ಅವರಪ್ಪನೂ ಜೈಲಿಗೆ ಹೋಗ್ಬೇಕು ಎಂದ ಖರ್ಗೆಗೆ ಸಂಕಷ್ಟ – ದೂರು ದಾಖಲು
ಖರ್ಗೆ ಅವರ ಹೇಳಿಕೆ ವಿರುದ್ಧ ಬಿಹಾರದ ಬಿಜೆಪಿ ಕಾರ್ಯಕರ್ತರೊಬ್ಬರು ಭಾನುವಾರ ಪೊಲೀಸ್ ದೂರು ದಾಖಲಿಸಿದ್ದಾರೆ. ಪಟ್ನಾದ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಭಾನುವಾರ ಸಂಜೆ ದೂರು ಸಲ್ಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಗಾಂಧಿ ಮೈದಾನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ದೂರನ್ನು ಅಲ್ಲಿಗೆ ವರ್ಗಾಯಿಸಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ಮೋದಿ ಅವರಪ್ಪನೂ ಹೋಗ್ತಾರೆ – ವೇದಿಕೆಯಲ್ಲೇ ತಾಳ್ಮೆ ಕಳೆದುಕೊಂಡ ಖರ್ಗೆ
