ಬೆಳಗಾವಿ: ಕಬ್ಬು ಬೆಳೆಗಾರರ (Farmers Protest) ಸವಾಲುಗಳು ಮತ್ತು ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ನಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸಕ್ಕರೆ ಹಾಗೂ ಜವಳಿ ಸಚಿವ ರುದ್ರಪ್ಪ ಲಮಾಣಿ (Rudrappa Lamani ) ಹೇಳಿದರು.
ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.
ರೈತರ ಹಿತರಕ್ಷಣೆ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಕಾರ್ಖಾನೆ ಮಾಲೀಕರ ಸವಾಲುಗಳನ್ನೂ ಗಮನದಲ್ಲಿಟ್ಟುಕೊಂಡು ಸರ್ವಸಮ್ಮತ ಹಾಗೂ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ಸರ್ಕಾರ ನಿರಂತರ ಶ್ರಮಿಸುತ್ತಿದೆ ಎಂದು ಸಚಿವರು ಭರವಸೆ ನೀಡಿದರು.
ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರಿಬ್ಬರ ಹಿತರಕ್ಷಣೆಯೂ ಸರ್ಕಾರದ ಜವಾಬ್ದಾರಿಯಾಗಿದೆ. ಕಳೆದ 10 ವರ್ಷಗಳಿಂದ ಸಕ್ಕರೆ ಬೆಲೆ ಏರಿಕೆಯಾಗದೇ ಇರುವುದರಿಂದ ಕಬ್ಬು ಬೆಳೆಗಾರರಿಗೆ ನಷ್ಟ ಹೆಚ್ಚಾಗಿದ್ದು, ಪ್ರತಿ ಟನ್ ಕಬ್ಬಿಗೆ 6 ಸಾವಿರ ರೂಪಾಯಿವರೆಗೆ ಬೆಲೆ ನಿಗದಿ ಪಡಿಸುವಂತೆ ರೈತರು ಬೇಡಿಕೆ ಇಟ್ಟಿದ್ದಾರೆ ಶೀಘ್ರದಲ್ಲೇ ಮುಖ್ಯಮಂತ್ರಿಯವರು ಈ ಕುರಿತು ಸೂಕ್ತ ನಿರ್ಧಾರ ಪ್ರಕಟಿಸುತ್ತಾರೆ ಎಂದು ಸಚಿವ ರುದ್ರಪ್ಪ ಲಮಾಣಿ ತಿಳಿಸಿದರು.ಇದನ್ನೂ ಓದಿ: ಪ್ರಸಿದ್ಧ ಹುಲಿಗೆಮ್ಮ ದೇವಸ್ಥಾನಕ್ಕೆ ತಟ್ಟಿದ ಅಸ್ಪೃಶ್ಯತೆ – ಮಾತಂಗಿ ದೇವಿ ದರ್ಶನಕ್ಕೆ ತಡೆ ಆರೋಪ
ಇನ್ನು ಪ್ರತಿಭಟನೆ ನೆಪದಲ್ಲಿ ಅಹಿತಕರ ಘಟನೆಗಳಲ್ಲಿ ಯಾರೂ ತೊಡಗಿಸಿಕೊಳ್ಳಬಾರದು. ರೈತರ ಹಿತವೇ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಎಲ್ಲಾ ಸಮಸ್ಯೆಗಳಿಗೆ ಪರಿಹಾರವಿದೆ. ಈ ನಿಟ್ಟಿನಲ್ಲಿ ಸರ್ಕಾರ ಸರ್ವ ಪ್ರಯತ್ನ ಮಾಡುತ್ತಿದೆ ಎಂದು ಸಚಿವರು ರೈತರಿಗೆ ಮನವರಿಕೆ ಮಾಡಿದರು.
ಸಭೆಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಣ್ ಸವದಿ, ಎನ್. ಚಲುವರಾಯಸ್ವಾಮಿ, ಎಂ.ಬಿ. ಪಾಟೀಲ್, ಸಂತೋಷ್ ಲಾಡ್, ಎಸ್.ಎಸ್. ಮಲ್ಲಿಕಾರ್ಜುನ್, ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಶಾಸಕರಾದ ಹೆಚ್.ಕೆ. ಪಾಟೀಲ್, ಆರ್.ಬಿ. ತಿಮ್ಮಾಪುರ, ವಿಜಯಾನಂದ ಕಾಶಪ್ಪನವರ್, ದರ್ಶನ್ ಪುಟ್ಟಣ್ಣಯ್ಯ, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಸುನಂದಾ ಜಯರಾಮ್, ಕುರುಬೂರು ಶಾಂತಕುಮಾರ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಗೌರವ್ ಗುಪ್ತಾ, ರಿತೇಶ್ ಕುಮಾರ್ ಸಿಂಗ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.ಇದನ್ನೂ ಓದಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು
