ಬೆಳಗಾವಿ: ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ಮಾಜಿ ಸಂಸದ ಶಿವಾನಂದ ಕೌಜಲಗಿ (87)ಅವರು ವಯೋಸಹಜ ಅನಾರೋಗ್ಯದ ಕಾರಣ ಬೈಲಹೊಂಗಲದ ತಮ್ಮ ನಿವಾಸದಲ್ಲಿ ಲಿಂಗೈಕ್ಯರಾಗಿದ್ದಾರೆ.
ತಂದೆಯ ನಿಧನದ ವಿಚಾರವನ್ನು ಅವರ ಪುತ್ರ, ಬೈಲಹೊಂಗಲ ಕ್ಷೇತ್ರದ ಹಾಲಿ ಶಾಸಕ ಮಹಾಂತೇಶ ಕೌಜಲಗಿ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಮೂಲಕ ಹಂಚಿಕೊಂಡಿದ್ದಾರೆ.
ಶಿವಾನಂದ ಕೌಜಲಗಿ(Shivanand Koujalgi) ಅವರು ಉತ್ತರ ಕರ್ನಾಟಕದ ಹಿರಿಯ ಮತ್ತು ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು. ಬೈಲಹೊಂಗಲ(Bailhongal) ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದರು. ರಾಜ್ಯ ಸರ್ಕಾರದಲ್ಲಿ ಲೋಕೋಪಯೋಗಿ (PWD) ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇದನ್ನೂ ಓದಿ: ಗೋಹತ್ಯೆ ಮಾಡಿದ್ದ ಮೂವರಿಗೆ ಜೀವಾವಧಿ ಶಿಕ್ಷೆ; ತೀರ್ಪಿನಲ್ಲಿ ಮನುಸ್ಮೃತಿ ಉಲ್ಲೇಖಿಸಿದ ಕೋರ್ಟ್
1996 ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿ ಸಂಸತ್ತಿನಲ್ಲಿ ರಾಜ್ಯದ ಧ್ವನಿಯಾಗಿದ್ದರು. ನಾಡಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕರ್ನಾಟಕ ಲಿಂಗಾಯತ ಎಜ್ಯುಕೇಶನ್ ಸೊಸೈಟಿ (KLE Society) ಸಂಸ್ಥೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿ ಶೈಕ್ಷಣಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದರು.
ಮೃತರ ಅಂತಿಮ ಸಂಸ್ಕಾರವು ನಾಳೆ ಬೆಳಗ್ಗೆ 11 ಗಂಟೆಗೆ ಬೈಲಹೊಂಗಲ ಪಟ್ಟಣದ ಅನಿಗೋಳ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಸಕಲ ವಿಧಿವಿಧಾನಗಳೊಂದಿಗೆ ನೆರವೇರಲಿದೆ ಎಂದು ಪುತ್ರ ಮಹಾಂತೇಶ ಕೌಜಲಗಿ ತಿಳಿಸಿದ್ದಾರೆ.
