ಬೆಂಗಳೂರು: ರಾಷ್ಟ್ರೋತ್ಥಾನ ಸಾಹಿತ್ಯದ(Rashtrotthana Sahitya) ವತಿಯಿಂದ ಇಲ್ಲಿನ ಕೆಂಪೇಗೌಡನಗರದ ರಾಷ್ಟ್ರೋತ್ಥಾನ ಪರಿಷತ್ನ ‘ಕೇಶವಶಿಲ್ಪ’ ಸಭಾಂಗಣದಲ್ಲಿ ಅಕ್ಟೋಬರ್ 31ರಿಂದ ಡಿಸೆಂಬರ್ 6ರ ವರೆಗೆ 37 ದಿನಗಳ ಕಾಲ ‘6ನೇ ಕನ್ನಡ ಪುಸ್ತಕ ಹಬ್ಬ–2026’ ಆಯೋಜಿಸಲಾಗಿದೆ.
ಅಕ್ಟೋಬರ್ 31ರಂದು ಸಂಜೆ 6 ಗಂಟೆಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು ಪುಸ್ತಕ ಹಬ್ಬವನ್ನು(Book Festival) ಉದ್ಘಾಟಿಸಲಿದ್ದಾರೆ. ‘ಪದ್ಮಭೂಷಣ’ ಪುರಸ್ಕೃತ ಬಹುಶ್ರುತ ವಿದ್ವಾಂಸ ಶತಾವಧಾನಿ ಡಾ. ಆರ್. ಗಣೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ರಾಷ್ಟ್ರೋತ್ಥಾನ ಪರಿಷತ್ ಅಧ್ಯಕ್ಷ ಎಂ. ಪಿ. ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಉದ್ಘಾಟನೆಗೂ ಮುನ್ನ, ಸಂಜೆ 4 ಗಂಟೆಯಿಂದ ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯಲ್ಲಿರುವ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯಿಂದ ರಾಷ್ಟ್ರೋತ್ಥಾನ ಪರಿಷತ್ತಿನವರೆಗೆ ತಾಯಿ ಭುವನೇಶ್ವರಿಯ ಭವ್ಯ ಶೋಭಾಯಾತ್ರೆ ಜರುಗಲಿದೆ. ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯ ಗೌರವ ಕಾರ್ಯದರ್ಶಿ ವಿ. ನಾಗರಾಜ್ ಹಾಗೂ ರಾಷ್ಟ್ರೋತ್ಥಾನ ಪರಿಷತ್ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಪುಸ್ತಕಗಳಿಗೆ ಭರ್ಜರಿ ರಿಯಾಯಿತಿ:
ಕಳೆದ ಆರು ದಶಕಗಳಿಂದ ಸದಭಿರುಚಿಯ ಸಾಹಿತ್ಯ ಪ್ರಸಾರದಲ್ಲಿ ತೊಡಗಿರುವ ರಾಷ್ಟ್ರೋತ್ಥಾನ ಸಾಹಿತ್ಯವು, 2021ರಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ‘ಕನ್ನಡ ಪುಸ್ತಕ ಹಬ್ಬ’ವನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿಯ ಮೇಳದಲ್ಲಿ ರಾಷ್ಟ್ರೋತ್ಥಾನ ಸಾಹಿತ್ಯದ ಕೃತಿಗಳು ಮಾತ್ರವಲ್ಲದೆ, ನಾಡಿನ ವಿವಿಧ ಪ್ರಕಾಶಕರ ಮೌಲ್ಯಯುತ ಪುಸ್ತಕಗಳು ಶೇ.10ರಿಂದ ಶೇ 60ರ ವರೆಗಿನ ರಿಯಾಯಿತಿ ದರದಲ್ಲಿ ಓದುಗರಿಗೆ ದೊರೆಯಲಿವೆ.
ವೈವಿಧ್ಯಮಯ ಚಟುವಟಿಕೆಗಳು: ಹಬ್ಬದ ಅವಧಿಯಲ್ಲಿ ಪ್ರತಿದಿನ ಬೆಳಿಗ್ಗೆ 10ರಿಂದ ರಾತ್ರಿ 9ರ ವರೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಇದರೊಂದಿಗೆ ಹೊಸ ಪುಸ್ತಕಗಳ ಲೋಕಾರ್ಪಣೆ, ಸಾಹಿತ್ಯ-ಸಂಸ್ಕೃತಿ ಕುರಿತ ಉಪನ್ಯಾಸಗಳು, ವಿಚಾರ ಸಂಕಿರಣಗಳು ಹಾಗೂ ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸಾಹಿತ್ಯಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ದೀಪಾವಳಿ ಸಂದರ್ಭದಲ್ಲಿ ಗೋಪೂಜೆ ಹಾಗೂ ದೇಸಿ ಗೋತಳಿಗಳ ಕುರಿತ ಜಾಗೃತಿ ಕಾರ್ಯಕ್ರಮಗಳೂ ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.
ಸ್ಥಳ: ‘ಕೇಶವಶಿಲ್ಪ’ ಸಭಾಂಗಣ, ರಾಷ್ಟ್ರೋತ್ಥಾನ ಪರಿಷತ್, ಕೆಂಪೇಗೌಡನಗರ, ಬೆಂಗಳೂರು–560004
ಸಮಯ: ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9 ರವರೆಗೆ
