ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ. ಮಡಿಕೇರಿ ನಗರದಲ್ಲೇ MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಆಟೋ ರಿಕ್ಷಾದಲ್ಲೇ ಮಾದಕ ವಸ್ತುಗಳನ್ನು ಇಟ್ಟುಕೊಂಡು ಮಾರಾಟಕ್ಕೆ ಸಿದ್ಧತೆ ನಡೆಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಬರೋಬ್ಬರಿ 4 ಲಕ್ಷಕ್ಕೂ ಅಧಿಕ ಮೌಲ್ಯದ MDMA ವಶಪಡಿಸಿಕೊಂಡಿದ್ದಾರೆ.
ಮಡಿಕೇರಿ ನಗರದ ಗೌಳಿಬೀದಿಯ ಕಂಚಿ ಕಾಮಾಕ್ಷಿ ದೇವಸ್ಥಾನದ ಬಳಿಯ ಸಾರ್ವಜನಿಕ ಮೈದಾನದಲ್ಲಿ ಆಟೋ ರಿಕ್ಷಾದಲ್ಲೇ ಮಾದಕ ವಸ್ತುಗಳನ್ನು ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳನ್ನ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮಡಿಕೇರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನ 29 ವರ್ಷದ ರುಹೇಜ್ ಶೇಖ್ ಹಾಗೂ 19 ವರ್ಷದ ಮೊಹಮ್ಮದ್ ಶಾಕೀಬ್ ಎಂದು ಗುರುತಿಸಲಾಗಿದೆ.
ಆರೋಪಿಗಳ ಬಳಿಯಿದ್ದ ಬರೋಬ್ಬರಿ 11 ಗ್ರಾಂ MDMA ಮಾದಕ ವಸ್ತುವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ ಸುಮಾರು 4 ಲಕ್ಷದ 4 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಇನ್ನೂ ಮಾದಕ ವಸ್ತು ಮಾರಾಟಕ್ಕೆ ಬಳಸುತ್ತಿದ್ದ ಕೆಎ-12 ಬಿ-5552 ನೋಂದಣಿ ಸಂಖ್ಯೆಯ ಆಟೋ ರಿಕ್ಷಾ ಸೇರಿದಂತೆ ಐದು ಮೊಬೈಲ್ ಫೋನ್ಗಳು, ತೂಕದ ಯಂತ್ರ ಹಾಗೂ ಬ್ಯಾಗ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಈ ಪ್ರಕರಣ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಎಲ್ಲಿಂದ ಮಾದಕ ವಸ್ತುಗಳನ್ನು ತಂದಿದ್ದರು? ಮಡಿಕೇರಿಯಲ್ಲಿ ಯಾರಿಗೆ ಮಾರಾಟ ಮಾಡಲು ಮುಂದಾಗಿದ್ದರು? ಈ ಜಾಲದ ಹಿಂದೆ ಇನ್ನೂ ಯಾರಾದರೂ ಇದ್ದಾರೆಯೇ? ಎಂಬ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮಡಿಕೇರಿ ನಗರದಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳ ಬಂಧನದ ಬೆನ್ನಲ್ಲೇ ಡ್ರಗ್ಸ್ ಜಾಲದ ಮೂಲ ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಮಾದಕ ವಸ್ತುಗಳ ವಿರುದ್ಧ ಪೊಲೀಸರ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಂಡಿದೆ.

