ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಚೊಕ್ಕರೆಡ್ಡಿಹಳ್ಳಿ ಗ್ರಾಮದ ಬಳಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ (Series Accident) ಬೈಕ್ನಲ್ಲಿದ್ದ ದಂಪತಿ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.
ಚೊಕ್ಕರೆಡ್ಡಿಹಳ್ಳಿ ಗ್ರಾಮದ ಬಳಿ ಗೂಡ್ಸ್ ಬೊಲೆರೋ ವಾಹನ, ಎರಡು ಆಟೋಗಳು, ಬೈಕ್ ಹಾಗೂ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬೊಲೆರೋ ವಾಹನದ ಅತಿ ವೇಗ ಹಾಗೂ ಟೈರ್ ಬ್ಲಾಸ್ಟ್ ಆಗಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ, ಎದುರು ದಿಕ್ಕಿನಿಂದ ಬರುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಬೈಕ್ನಲ್ಲಿದ್ದ ಚಿಂತಾಮಣಿ ತಾಲೂಕಿನ ಬ್ರಾಹ್ಮಣರಹಳ್ಳಿ ಗ್ರಾಮದ ನಿವಾಸಿಗಳಾದ ಶ್ರೀನಿವಾಸ್ ಹಾಗೂ ಅವರ ಪತ್ನಿ ನರಸಮ್ಮ ಮೃತಪಟ್ಟಿದ್ದಾರೆ. ಇನ್ನು ಆಟೋದಲ್ಲಿದ್ದ ಚಿಂತಾಮಣಿ ನಗರದ ಜೆಜೆ ಕಾಲೋನಿ ನಿವಾಸಿ ಆಂಜಿನಮ್ಮ (45) ಕೂಡ ದುರ್ಮರಣಕ್ಕೀಡಾಗಿದ್ದಾರೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

