ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ (Anekal) ತಾಲೂಕಿನ ಅತ್ತಿಬೆಲೆ (Attibele) ಕೈಗಾರಿಕಾ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ (Fire Accident) ಸಂಭವಿಸಿದೆ. ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ನಡೆಸಲಾಗುತ್ತಿದ್ದ ಸ್ಕ್ರಾಪ್ ಗೋಡೌನ್ ಒಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದಿದೆ.
ನೋಡನೋಡುತ್ತಿದ್ದಂತೆ ಬೆಂಕಿಯ ಜ್ವಾಲೆ ಇಡೀ ಗೋಡೌನ್ನ್ನು ಆವರಿಸಿಕೊಂಡು ಧಗಧಗನೆ ಹೊತ್ತಿ ಉರಿದಿದೆ. ಈ ಸ್ಕ್ರಾಪ್ ಗೋದಾಮನ್ನು ಯಾವುದೇ ರೀತಿಯ ಅಧಿಕೃತ ಅನುಮತಿ ಪಡೆಯದೆ ಅಕ್ರಮವಾಗಿ ನಿರ್ಮಿಸಿಕೊಂಡಿರಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ದೀಪಾವಳಿ ಸಂಭ್ರಮಾಚರಣೆಯಲ್ಲಿ ಪಟಾಕಿ ಕಿಡಿ ಬಿದ್ದು ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ, ಸುದೀರ್ಘ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳು ಸಂಭವಿಸಿಲ್ಲ.
ಅತ್ತಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
