ಉಡುಪಿ: ಪತಿ ಹಾಗೂ ಪತ್ನಿ ಪರಸ್ಪರರು ಕೈಗಳನ್ನು ಚೂಡಿದಾರದ ಶಾಲಿನಿಂದ ಕಟ್ಟಿಕೊಂಡು ಸೀತಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಾಬುಕಳ ಸೇತುವೆ ಬಳಿ ನಡೆದಿದೆ.
ಮೃತರನ್ನು ಮೂಲತಃ ತುಮಕೂರು ಜಿಲ್ಲೆಯವರಾದ ಶ್ರೀನಿವಾಸ್ ಮೂರ್ತಿ ಹೆಚ್. (52) ಹಾಗೂ ಗಂಗಾ (48) ಎಂದು ಗುರುತಿಸಲಾಗಿದೆ.
ದಂಪತಿ ನದಿಗೆ ಹಾರುವುದನ್ನು ಗಮನಿಸಿದ ರಿಕ್ಷಾ ಚಾಲಕರೊಬ್ಬರು ತಕ್ಷಣ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಪರಿಶೀಲನೆ ನಡೆಸಿದಾಗ ದಂಪತಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದರೂ ಆರಂಭದಲ್ಲಿ ದಂಪತಿಯ ಸುಳಿವು ಪತ್ತೆಯಾಗಿರಲಿಲ್ಲ.
ಬಳಿಕ ಮಾಬುಕಳ ಸೇತುವೆಯಿಂದ ಸುಮಾರು 500 ಮೀಟರ್ ದೂರದಲ್ಲಿರುವ ಪಾಂಡೇಶ್ವರದ ಸೀತಾ ನದಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಆತ್ಮಹತ್ಯೆಗೂ ಮುನ್ನ ದಂಪತಿ ತಮ್ಮ ಕೈಗಳನ್ನು ಚೂಡಿದಾರದ ಶಾಲಿನಿಂದ ಪರಸ್ಪರ ಕಟ್ಟಿಕೊಂಡಿದ್ದರು ಎನ್ನಲಾಗಿದ್ದು, ಅದೇ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.
ಘಟನಾ ಸ್ಥಳಕ್ಕೆ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಂಪತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಕೋಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
