– ಸಿಎಂ, ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ – ಯು.ಟಿ ಖಾದರ್ ಭರವಸೆ
ಬೆಂಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು (Asha workers) ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಕನಿಷ್ಠ ಮಾಸಿಕ ವೇತನವನ್ನು 15 ಸಾವಿರ ರೂಪಾಯಿಗೆ ಹೆಚ್ಚಿಸುವಂತೆ ಆಗ್ರಹಿಸಿರುವ ಕಾರ್ಯಕರ್ತೆಯರು, ಸರ್ಕಾರ ಕೇವಲ ಭರವಸೆ ನೀಡದೆ ಅಧಿಕೃತ ಆದೇಶ ಹೊರಡಿಸುವವರೆಗೂ ಹೋರಾಟ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ನಿನ್ನೆಯಿಂದ ಆರಂಭವಾಗಿರುವ ಈ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ನಲ್ಲೇ ಧರಣಿ ನಡೆಸುತ್ತಿದ್ದಾರೆ. ಬೆಂಗಳೂರಿನ (Bengaluru) ತೀವ್ರ ಚಳಿಯನ್ನೂ ಲೆಕ್ಕಿಸದೆ ರಾತ್ರಿ ಇಡೀ ಪ್ರತಿಭಟನಾ ಸ್ಥಳದಲ್ಲೇ ಕಳೆದಿದ್ದಾರೆ.

ಇನ್ನು ಪ್ರತಿಭಟನೆಯ ವೇಳೆ ಮಾನವೀಯ ಮನಕಲಕುವ ದೃಶ್ಯಗಳೂ ಕಂಡುಬಂದಿವೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟಕ್ಕೆ ಇಳಿದಿರುವ ಆಶಾ ಕಾರ್ಯಕರ್ತೆಯರು ಪುಟ್ಟ ಪುಟ್ಟ ಮಕ್ಕಳನ್ನೂ ತಮ್ಮೊಂದಿಗೆ ಕರೆತಂದಿದ್ದಾರೆ. ಚಳಿಯ ನಡುವೆಯೇ ಪುಟಾಣಿ ಮಕ್ಕಳೊಂದಿಗೆ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾರ್ಯಕರ್ತೆಯರ ಪರಿಸ್ಥಿತಿ ಗಮನ ಸೆಳೆದಿದೆ.
ಪ್ರತಿಭಟನಾ ಸ್ಥಳಕ್ಕೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ
ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಆರೋಗ್ಯ ಸಚಿವ ಯು.ಟಿ. ಖಾದರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಕಾರ್ಯಕರ್ತೆಯರ ಮನವಿಯನ್ನು ಸ್ವೀಕರಿಸಿ, ಅವರ ಅಹವಾಲುಗಳನ್ನು ಆಲಿಸಿದರು.

ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹಾಗೂ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ. ಆದರೆ, ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುವವರೆಗೂ ಹೋರಾಟ ಮುಂದುವರಿಸುವುದಾಗಿ ಆಶಾ ಕಾರ್ಯಕರ್ತೆಯರು ಸ್ಪಷ್ಟಪಡಿಸಿದ್ದಾರೆ.
