ಬೆಂಗಳೂರು: ಕಂಟೋನ್ಮೆಂಟ್ನಲ್ಲಿರುವ ಪಶು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ (Veterinary Hospital) ಪಶುಸಂಗೋಪನಾ ಸಚಿವ ಪುಟ್ಟರಂಗ ಶೆಟ್ಟಿ ಅವರು ಇಂದು ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಸುಮ್ಮನೆ ಹೊರಗಿನಿಂದ ನೋಡಿ ಹೋಗದೆ, ಪ್ರತಿಯೊಂದು ವಿಭಾಗಕ್ಕೂ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮುಖ್ಯವಾಗಿ ಸ್ಕ್ಯಾನಿಂಗ್ ಕೊಠಡಿ, ಶಸ್ತ್ರಚಿಕಿತ್ಸಾ ಕೊಠಡಿ ಮತ್ತು ಔಷಧ ವಿತರಣಾ ವಿಭಾಗಗಳಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಸಿಗುತ್ತಿರುವ ಚಿಕಿತ್ಸೆ ಹಾಗೂ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.
ಇದೇ ವೇಳೆ ಆಸ್ಪತ್ರೆಗೆ ತಮ್ಮ ಸಾಕುಪ್ರಾಣಿಗಳು ಹಾಗೂ ಜಾನುವಾರುಗಳನ್ನು ಕರೆದುಕೊಂಡು ಬರುವ ಸಾರ್ವಜನಿಕರು ಸಚಿವರ ಬಳಿ ತಮ್ಮ ಕಷ್ಟ ಹೇಳಿಕೊಂಡಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲದೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ. ಜನರ ಈ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸಚಿವ ಪುಟ್ಟರಂಗ ಶೆಟ್ಟಿ, ಆದಷ್ಟು ಬೇಗ ಆಸ್ಪತ್ರೆ ಆವರಣದಲ್ಲಿ ಹೊಸದಾಗಿ ಶೌಚಾಲಯ ನಿರ್ಮಿಸಿಕೊಡುವುದಾಗಿ ಸ್ಥಳದಲ್ಲೇ ಭರವಸೆ ನೀಡಿದ್ದಾರೆ.
ಕರ್ತವ್ಯಕ್ಕೆ ಗೈರಾದ ಅಧಿಕಾರಿಗೆ ನೋಟಿಸ್
ಪರಿಶೀಲನೆಯ ಸಮಯದಲ್ಲಿ ಆಸ್ಪತ್ರೆಯ ಉಪನಿರ್ದೇಶಕ ಡಾ. ಚಂದ್ರಶೇಖರ್ ಟಿ. ಅವರು ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗದೆ ಗೈರಾಗಿರುವುದು ಸಚಿವರ ಗಮನಕ್ಕೆ ಬಂದಿದೆ. ಇದನ್ನು ತುಂಬಾ ಗಂಭೀರವಾಗಿ ಪರಿಗಣಿಸಿದ ಸಚಿವರು, ಕರ್ತವ್ಯ ನಿರ್ಲಕ್ಷ್ಯ ತೋರಿದ ಅಧಿಕಾರಿಗೆ ತಕ್ಷಣವೇ ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ಸರ್ಕಾರದ ಆದಾಯ ನಷ್ಟ ತಪ್ಪಿಸಲು ಹೊಸ ಪ್ಲ್ಯಾನ್ – ಆಸ್ತಿ ಗೈಡೆನ್ಸ್ ಮೌಲ್ಯ ಹೆಚ್ಚಿಸುವ ಸುಳಿವು ಕೊಟ್ಟ ಡಿಸಿಎಂ ಪರಂ
ಬಳಿಕ ಮಾತನಾಡಿದ ಸಚಿವರು, ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಉತ್ತಮ ಸೇವೆ ಸಿಗಬೇಕು ಮತ್ತು ಮೂಕ ಪ್ರಾಣಿಗಳಿಗೆ ಗುಣಮಟ್ಟದ ಚಿಕಿತ್ಸೆ ದೊರೆಯಬೇಕು. ಇಲಾಖೆಯಲ್ಲಿ ಪ್ರತಿಯೊಬ್ಬರೂ ಶಿಸ್ತು ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಬೇಕು, ಇದೇ ನಮ್ಮ ಮೊದಲ ಆದ್ಯತೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಪಶುಪಾಲನಾ ಇಲಾಖೆ ಆಯುಕ್ತರಾದ ಲಿಂಗರಾಜು, ಸಚಿವರ ಆಪ್ತ ಕಾರ್ಯದರ್ಶಿ ಡಾ. ರಾಜೀವ್ ಎನ್. ಕೂಲೇರ ಹಾಗೂ ಆಸ್ಪತ್ರೆಯ ಪಶುವೈದ್ಯರು ಹಾಜರಿದ್ದರು.ಇದನ್ನೂ ಓದಿ: ಅಂತಾರಾಷ್ಟ್ರೀಯ ಚಿತ್ರೋತ್ಸವದ ಭಾರತೀಯ ಪನೋರಮಾಗೆ ತುಳು ಚಿತ್ರ
