ಮಡಿಕೇರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ವೇತನ ಪಾವತಿ ವಿಚಾರವಾಗಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ವೇತನ ಪಾವತಿಸುವ ಪ್ರಕ್ರಿಯೆಯಲ್ಲಿ ಗೋಲ್ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಇಲಾಖೆಯ ಮೂವರು ಸಿಬ್ಬಂದಿ ವಿರುದ್ಧ ಮಡಿಕೇರಿ (Madikeri) ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
2023-24ರಿಂದ 2025-26ನೇ ಸಾಲಿನವರೆಗೆ ವೇತನ ಪಾವತಿಯಲ್ಲಿ ಅಕ್ರಮ ನಡೆದಿರುವ ಸಾಧ್ಯತೆಯಿದ್ದು, ಸರ್ಕಾರಿ ಹಣ ದುರುಪಯೋಗವಾಗಿರುವ ಬಗ್ಗೆಯೂ ಇಲಾಖೆಯ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.
ಮೂವರು ಸಿಬ್ಬಂದಿ ವಿರುದ್ಧ ದೂರು
ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿದ್ದ ಸೀತಾಲಕ್ಷ್ಮಿ ಟಿ.ಎಸ್., ಬಾಹ್ಯ ಮೂಲದ ಕಂಪ್ಯೂಟರ್ ಆಪರೇಟರ್ ತೇಜಸ್ವಿನಿ ಪಿ.ಎ. ಮತ್ತು ಬಾಹ್ಯ ಮೂಲದ ಗ್ರೂಪ್-ಡಿ ಸಿಬ್ಬಂದಿ ಚಂದ್ರಶೇಖರ್ ವಿರುದ್ಧ ದೂರು ನೀಡಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹೆಸರಿನಲ್ಲಿ ವೇತನ ಪಾವತಿಯಲ್ಲಿ ಅಕ್ರಮ ನಡೆದಿದೆಯೇ? ಸರ್ಕಾರಿ ಹಣ ದುರುಪಯೋಗವಾಗಿದೆಯೇ? ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.ಇದನ್ನೂ ಓದಿ: ವಿಡಿಯೋ ಕರೆ, ಅಶ್ರುವಾಯು, ಗುಂಡಿನ ಚಕಮಕಿ – ಮಸೀದಿಯಲ್ಲಿ ಅಡಗಿದ್ದ ಉಗ್ರನನ್ನು ಹೊರಗೆ ಕರೆತಂದಿದ್ದು ಹೇಗೆ?
ಈ ಸಂಬಂಧ ನವೆಂಬರ್ 3ರಂದು ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ಬಳಿಕ ನವೆಂಬರ್ 4ರಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪೊಲೀಸರಿಗೆ ಪತ್ರ ರವಾನಿಸಿ, ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸುವಂತೆ ಕೋರಲಾಗಿದೆ. ನವೆಂಬರ್ 11ರಂದು ಉಪನಿರ್ದೇಶಕರ ಕಚೇರಿಯಿಂದಲೂ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ವ್ಯವಹಾರ ನಡೆಸಲಾಗಿದೆ.
ವೇತನ ಪಾವತಿಯಲ್ಲಿ ಅಕ್ರಮ ನಡೆದಿರುವುದು ತನಿಖೆಯಿಂದ ದೃಢಪಟ್ಟರೆ, ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳು ಒತ್ತಾಯಿಸಿದ್ದಾರೆ. ಸದ್ಯ ಈ ಪ್ರಕರಣದ ಸಂಪೂರ್ಣ ಸತ್ಯಾಂಶ ಪೊಲೀಸ್ ತನಿಖೆಯ ಬಳಿಕವಷ್ಟೇ ಹೊರಬರಬೇಕಿದೆ.ಇದನ್ನೂ ಓದಿ: ಭಾರತದ ಆರ್ಥಿಕತೆ ಸತ್ತು ಹೋಗಿದೆ ಎಂದು ಟೀಕಿಸಿದ ರಾಹುಲ್ ಗಾಂಧಿ; ಅಂಕಿ-ಅಂಶಗಳ ಸಮೇತ ಬಿಜೆಪಿ ತಿರುಗೇಟು
