* ಅರ್ಹ ರೈತರಿಗೆ ಬರ ಪರಿಹಾರವನ್ನು ತ್ವರಿತವಾಗಿ ತಲುಪಿಸಲು ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ
* 15 ಲಕ್ಷ ನಿವೇಶನಗಳ ವಿತರಣೆ ಯೋಜನೆಗೆ ವಿಶೇಷ ಆದ್ಯತೆ ನೀಡಲು ನಿರ್ದೇಶನ
ಬೆಂಗಳೂರು: ಸರ್ಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳು ನಿಗದಿತ ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಆಡಳಿತದಲ್ಲಿ ನಿರ್ಲಕ್ಷ್ಯ ಹಾಗೂ ಅನಗತ್ಯ ವಿಳಂಬವನ್ನು ಸಹಿಸುವುದಿಲ್ಲ ಎಂದು ಡಿಸಿಎಂ ಡಾ. ಜಿ.ಪರಮೇಶ್ವರ್ (G.Parameshwara) ಹೇಳಿದರು.
ವಿಕಾಸಸೌಧದಲ್ಲಿ ಇಂದು ಕಂದಾಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಾಧಿಸಿರುವ ಪ್ರಗತಿಯ ಕುರಿತು ಅಧಿಕಾರಿಗಳು ಸ್ಪಷ್ಟ ಮಾಹಿತಿ ನೀಡಬೇಕು. ಕೆಲವು ಜಿಲ್ಲೆಗಳು ಉತ್ತಮ ಕಾರ್ಯಕ್ಷಮತೆ ತೋರಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ. ಇದಕ್ಕೆ ಕಾರಣಗಳನ್ನು ಪರಿಶೀಲಿಸಿ, ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಬೇಕು. ನಿಗದಿತ ಕಾಲಮಿತಿಯೊಳಗೆ ಗುರಿ ಸಾಧಿಸುವುದು ಎಲ್ಲ ಅಧಿಕಾರಿಗಳ ಆದ್ಯತೆಯಾಗಬೇಕು ಎಂದು ಸೂಚಿಸಿದರು. ಇದನ್ನೂ ಓದಿ: 15 ಶೌಚಾಲಯ ವ್ಯವಸ್ಥೆ ಮಾಡಿದ್ದೇವೆಂದ ಮಹಿಳಾ ಆಯೋಗದ ಅಧ್ಯಕ್ಷರಿಗೆ ಕ್ಲಾಸ್; ತಬ್ಬಿಬ್ಬಾದ ನಾಗಲಕ್ಷ್ಮಿ ಚೌಧರಿ
ಬರ ಪರಿಸ್ಥಿತಿ
ರೈತರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಸೂಪರ್ ಎಲ್ನೀನೋ ಪರಿಣಾಮವಾಗಿ ರಾಜ್ಯದಲ್ಲಿ ಇಂತಹ ಭೀಕರ ಬರಗಾಲ ಎದುರಾಗಬಹುದು ಎಂಬುದನ್ನು ಯಾರೂ ನಿರೀಕ್ಷಿಸಿರಲಿಲ್ಲ. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದೆ. ಆದಾಗ್ಯೂ, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೃಷಿ ಉತ್ಪಾದನೆ ಕುಂಠಿತಗೊಂಡರೆ ಅದರ ಪರಿಣಾಮ ಇತರ ಕ್ಷೇತ್ರಗಳ ಮೇಲೂ ಬೀರುತ್ತದೆ ಎಂದರು.
ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಉತ್ತಮ ಬೆಳೆ ಬಂದಿರುವ ಬಗ್ಗೆ ವರದಿಗಳಿಲ್ಲ. ಹಿಂಗಾರು ಮಳೆಯೂ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಹೀಗಾಗಿ, ಬರದ ಪರಿಣಾಮ ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳ ಮೇಲೆ ಯಾವ ಪ್ರಮಾಣದಲ್ಲಿ ಬೀರಿದೆ ಎಂಬುದನ್ನು ಸಮಗ್ರವಾಗಿ ಪರಿಶೀಲಿಸಿ, ಅಗತ್ಯ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ವ್ಯವಸ್ಥೆಗೆ ಆದ್ಯತೆ: ಬರ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ಜಾನುವಾರುಗಳಿಗೆ ಅಗತ್ಯ ಪ್ರಮಾಣದಲ್ಲಿ ಮೇವು ಲಭ್ಯವಾಗುವಂತೆ ಕ್ರಮಕೈಗೊಳ್ಳಬೇಕು. ರೈತರಿಗೆ ಮೇವಿನ ಬೀಜದ ಕಿಟ್ಗಳನ್ನು ವಿತರಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನಗೊಂಡಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮೇವಿನ ಬೀಜದ ಕಿಟ್ಗಳ ವಿತರಣೆಗಾಗಿ ಹೆಚ್ಚುವರಿಯಾಗಿ 30 ಕೋಟಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಅದನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಬರ ಪರಿಹಾರ ವಿತರಣೆಯಲ್ಲಿ ವಿಳಂಬ ಸಲ್ಲದು: ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ನೆರವಾಗಲು ಅರ್ಹ ಪ್ರತಿ ರೈತರಿಗೆ 5,000 ರೂ. ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ, ಕೆಲವು ಜಿಲ್ಲೆಗಳಲ್ಲಿ ಈವರೆಗೂ ಪರಿಹಾರ ವಿತರಣೆ ಪೂರ್ಣಗೊಂಡಿಲ್ಲ. ಪರಿಹಾರ ಘೋಷಿಸಿ ಎರಡು ತಿಂಗಳು ಕಳೆದರೂ ರೈತರ ಖಾತೆಗಳಿಗೆ ಹಣ ಜಮೆಯಾಗದಿರುವುದು ಸರಿಯಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸರ್ಕಾರದ ಘೋಷಣೆಗಳು ಕೇವಲ ಪ್ರಕಟಣೆಗಳಿಗೆ ಸೀಮಿತವಾಗಬಾರದು. ಅವು ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ಬರಬೇಕು. ಪರಿಹಾರಕ್ಕಾಗಿ ಕಾಯುತ್ತಿರುವ ರೈತರಿಗೆ ಸರ್ಕಾರ ಏನು ಉತ್ತರಿಸಬೇಕು? ಇಂತಹ ವಿಳಂಬದಿಂದ ಸರ್ಕಾರದ ಬಗ್ಗೆ ಜನರಲ್ಲಿ ಯಾವ ಅಭಿಪ್ರಾಯ ಮೂಡುತ್ತದೆ ಎಂಬುದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಅರ್ಹ ರೈತರಿಗೆ ಪರಿಹಾರದ ಹಣವನ್ನು ಯಾವುದೇ ವಿಳಂಬವಿಲ್ಲದೆ ತಲುಪಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
15 ಲಕ್ಷ ನಿವೇಶನಗಳ ವಿತರಣೆಗೆ ವಿಶೇಷ ಆದ್ಯತೆ
ಬಡವರಿಗೆ ಶಾಶ್ವತ ಸೂರು ಕಲ್ಪಿಸುವುದು ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರೂ ಬಡವರು ಇಂದಿಗೂ ಗುಡಿಸಲುಗಳಲ್ಲಿ ವಾಸಿಸುವ ಪರಿಸ್ಥಿತಿ ಮುಂದುವರಿದಿರುವುದು ಕಳವಳಕಾರಿ ಎಂದು ಹೇಳಿದರು. ಇದನ್ನೂ ಓದಿ: ಸಂಪುಟ ವಿಸ್ತರಣೆಗೆ ‘ಪಕ್ಷ ಸಂಘಟನೆ’ಯ ಚೆಕ್ಮೇಟ್: ಸಿಎಂಗೆ ಜಂಟಿ ಮಾಸ್ಟರ್ ಸ್ಟ್ರೋಕ್ ಕೊಟ್ಟ ಸಿದ್ದು, ಹರಿಪ್ರಸಾದ್!
ಮುಖ್ಯಮಂತ್ರಿಗಳ ಆಶಯದಂತೆ ಬಡವರಿಗೆ 15 ಲಕ್ಷ ನಿವೇಶನಗಳನ್ನು ಒದಗಿಸುವ ಯೋಜನೆಯನ್ನು ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿ ಪರಿಗಣಿಸಿ, ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈ ಉದ್ದೇಶಕ್ಕಾಗಿ ಈಗಾಗಲೇ ಸುಮಾರು 24 ಸಾವಿರ ಎಕರೆ ಜಮೀನನ್ನು ಗುರುತಿಸಲಾಗಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸುವುದು, ಜಮೀನಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದು ಹಾಗೂ ನಿವೇಶನಗಳ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಯಾವುದೇ ವಿಳಂಬವಾಗಬಾರದು ಎಂದು ಸೂಚಿಸಿದರು.
ಪಿಂಚಣಿ ಫಲಾನುಭವಿಗಳ ಅರ್ಹತೆಯ ಸಮಗ್ರ ಪರಿಶೀಲನೆಗೆ ಸೂಚನೆ: ರಾಜ್ಯದಲ್ಲಿ ಪಿಂಚಣಿ ಸೌಲಭ್ಯಕ್ಕೆ ಒಳಪಡದ ಸುಮಾರು 23 ಲಕ್ಷ ಜನರನ್ನು ಗುರುತಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳು ಆರಂಭಿಕ ಹಂತದಲ್ಲಿಯೇ ಹೆಚ್ಚಿನ ಎಚ್ಚರಿಕೆ ವಹಿಸಬೇಕಿತ್ತು. ಪಿಂಚಣಿಗೆ ಅರ್ಹರಾಗಿರುವವರು ಸೌಲಭ್ಯದಿಂದ ವಂಚಿತರಾಗದಂತೆ ಹಾಗೂ ಅನರ್ಹರಿಗೆ ಸೌಲಭ್ಯ ದೊರೆಯದಂತೆ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.
ಸರ್ಕಾರದ ಪ್ರತಿಯೊಂದು ಯೋಜನೆಯ ಅನುಷ್ಠಾನದಲ್ಲಿಯೂ ಪಾರದರ್ಶಕತೆ, ವೇಗ ಮತ್ತು ಹೊಣೆಗಾರಿಕೆ ಇರಬೇಕು. ಅಧಿಕಾರಿಗಳು ಕೇವಲ ಪ್ರಗತಿ ವರದಿಗಳನ್ನು ಸಲ್ಲಿಸುವುದಕ್ಕೆ ಸೀಮಿತವಾಗದೆ, ಜನರಿಗೆ ಯೋಜನೆಗಳ ನೈಜ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ನಿಗದಿತ ಕಾಲಮಿತಿಯೊಳಗೆ ಗುರಿ ಸಾಧಿಸುವ ಮೂಲಕ ಆಡಳಿತ ವ್ಯವಸ್ಥೆಯ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕೃಷಿ ಇಲಾಖೆಯ ಕಾರ್ಯದರ್ಶಿ ತ್ರಿಲೋಕ್ಚಂದ್ರ, ಕಂದಾಯ ಆಯುಕ್ತೆ ಮೀನಾ ನಾಗರಾಜ್, ಭೂಮಾಪನ ಮತ್ತು ಭೂದಾಲೆಗಳ ಆಯುಕ್ತ ರಾಕೇಶ್ ಕುಮಾರ್, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಆಯುಕ್ತೆ ಹೊನ್ನಾಂಬ, ಯುವಜನಸೇವಾ ಮತ್ತು ಕ್ರೀಡಾ ಆಯುಕ್ತ ಎಂ.ಎನ್.ಅನುಚೇತ್ ಇದ್ದರು.
