ಕಾರವಾರ: ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು, ಆಸ್ಪತ್ರೆಯಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ದೊರೆಯುತ್ತಿರುವ ಚಿಕಿತ್ಸಾ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಹೆರಿಗೆ ವಿಭಾಗಕ್ಕೆ ಭೇಟಿ ನೀಡಿ ಗರ್ಭಿಣಿಯರು ಹಾಗೂ ಬಾಣಂತಿಯರೊಂದಿಗೆ ಮಾತನಾಡಿದ ಅವರು, ಸ್ನಾನಕ್ಕೆ ಮತ್ತು ಕುಡಿಯಲು ಬಿಸಿ ನೀರಿನ ಕೊರತೆ ಇರುವುದನ್ನು ರೋಗಿಗಳಿಂದಲೇ ತಿಳಿದುಕೊಂಡರು. ಕೂಡಲೇ ಅಗತ್ಯ ಕ್ರಮ ಕೈಗೊಂಡು ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಬಿಸಿ ನೀರು ಒದಗಿಸುವಂತೆ ಕ್ರಿಮ್ಸ್ ನಿರ್ದೇಶಕರಿಗೆ ಸೂಚನೆ ನೀಡಿದರು.
ಇದೇ ವೇಳೆ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಭವಿಷ್ಯ ನಿಧಿ (ಪಿಎಫ್) ಪಾವತಿಯಾಗದಿರುವ ಕುರಿತು ಸಿಬ್ಬಂದಿ ದೂರು ನೀಡಿದರು. ಈ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.
ನಂತರ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೂ ಭೇಟಿ ನೀಡಿದ ಅಧ್ಯಕ್ಷರು, ಪ್ರಯಾಣಿಕರೊಂದಿಗೆ ಸಂವಾದ ನಡೆಸಿ ಅಲ್ಲಿನ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಕ್ರಿಮ್ಸ್ ಆಸ್ಪತ್ರೆಯ ರೋಗಿಗಳೊಂದಿಗೂ ಮಾತನಾಡಿ ಅವರ ಕುಂದುಕೊರತೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಕ್ರಿಮ್ಸ್ ನಿರ್ದೇಶಕಿ ಡಾ. ಪೂರ್ಣಿಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ್ ದೊಡ್ಡಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ, ತಹಸೀಲ್ದಾರ್ ನಿಶ್ಚಲ್ ನರೋನ್ಹ, ಕ್ರಿಮ್ಸ್ನ ವಿವಿಧ ವಿಭಾಗಗಳ ಮುಖ್ಯಸ್ಥರು, ಕೆಎಸ್ಆರ್ಟಿಸಿ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
