ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲಿನಲ್ಲಿರುವ ನಟ ದರ್ಶನ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ. ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸಿರುವ ಅವರು, ಜೈಲಿನ ಆಸ್ಪತ್ರೆಯನ್ನು ಹೊರತುಪಡಿಸಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ (Treatment) ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ಆದ್ರೆ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ದರ್ಶನ್ (Darshan) ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ. ಎಸ್ಪಿಪಿ ಆಕ್ಷೇಪಣೆ ಸಲ್ಲಿಸಿದ ಬಳಿಕ ಅರ್ಜಿಯ ಕುರಿತು ಮುಂದಿನ ವಿಚಾರಣೆ ನಡೆಯಲಿದೆ.
ದರ್ಶನ್ ಮನವಿ ಏನು?
ಜೈಲಿನಲ್ಲಿ ಈವರೆಗೆ ಕೇವಲ ಮೂರು ಬಾರಿ ಮಾತ್ರ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿದೆ. ಇದರಿಂದ ತಮ್ಮ ನೋವು ಕಡಿಮೆಯಾಗಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಹೊರಗಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ನೀಡಬೇಕು ಎಂದು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ವಿಶೇಷ ಸೌಲಭ್ಯಗಳಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ, ಆರೋಗ್ಯದ ವಿಚಾರವಾಗಿರುವುದರಿಂದ ಅರ್ಜಿಯನ್ನ ತುರ್ತಾಗಿ ವಿಚಾರಣೆ ನಡೆಸುವಂತೆ ನ್ಯಾಯಾಲಯವನ್ನ ಕೋರಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ವಿಶೇಷ ಸರ್ಕಾರಿ ಅಭಿಯೋಜಕರಾದ (ಎಸ್ಪಿಪಿ) ಪ್ರಸನ್ನಕುಮಾರ್, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಬುಧವಾರ ಆಕ್ಷೇಪಣೆ ಸಲ್ಲಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಅರ್ಜಿಯ ತುರ್ತು ವಿಚಾರಣೆಯ ಅಗತ್ಯದ ಕುರಿತು ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಮತ್ತು ಎಸ್ಪಿಪಿ ನಡುವೆ ವಾಗ್ವಾದ ನಡೆದಿದೆ. ಈ ವೇಳೆ, ಜೈಲಿನಲ್ಲಿ ಸರಿಯಾದ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂಬ ಆರೋಪದ ಹಿನ್ನೆಲೆ ಜೈಲಿನ ಅಧಿಕಾರಿಗಳಿಂದ ವರದಿ ಪಡೆಯಲು ನ್ಯಾಯಾಧೀಶರು ಸೂಚಿಸಿದ್ದಾರೆ. ಅಲ್ಲದೆ, ಹಿರಿಯ ವೈದ್ಯಾಧಿಕಾರಿಗಳು ದರ್ಶನ್ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುವಂತೆಯೂ ನ್ಯಾಯಾಲಯ ನಿರ್ದೇಶನ ನೀಡಿದೆ.
ವಾದ – ಪ್ರತಿವಾದಗಳನ್ನು ಆಲಿಸಿದ ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ. ಎಸ್ಪಿಪಿ ಆಕ್ಷೇಪಣೆ ಸಲ್ಲಿಸಿದ ಬಳಿಕ ಅರ್ಜಿಯ ಕುರಿತು ಮುಂದಿನ ವಿಚಾರಣೆ ನಡೆಯಲಿದೆ.
