ಉಡುಪಿ: ಕಾಪು ಬೀಚ್ನಲ್ಲಿ (Kapu Beach) ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆಯಾಗಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಕೊಪ್ಪ ನಿವಾಸಿ ಅಲ್ತಾಫ್ ಅವರ ಪುತ್ರ ಸಮೀರ್ (20) ಹಾಗೂ ದಾವಣಗೆರೆಯ ಅಹಮ್ಮದಿ ನಗರದ ನಿವಾಸಿ ಝಿಯಾವುಲ್ಲಾ ಅವರ ಪುತ್ರ ಮಲ್ಲಿಕ್ ರಿಹಾನ್ (15) ಎಂದು ಗುರುತಿಸಲಾಗಿದೆ.
ಭಾನುವಾರ ದಾವಣಗೆರೆಯಿಂದ 12 ಮಂದಿ ಪ್ರವಾಸಕ್ಕೆಂದು ಕಾಪು ಬೀಚ್ಗೆ ಆಗಮಿಸಿದ್ದರು. ಈ ಪೈಕಿ ಐವರು ಸಮುದ್ರದಲ್ಲಿ ಈಜಲೆಂದು ನೀರಿಗೆ ಇಳಿದಿದ್ದರು. ಈ ವೇಳೆ ಸಮುದ್ರದಲ್ಲಿ ಏಕಾಏಕಿ ಅಪ್ಪಳಿಸಿದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ಕೊಚ್ಚಿಕೊಂಡು ಹೋಗಿದ್ದರು. ಘಟನೆ ಗಮನಿಸಿದ ತಕ್ಷಣ ಕಾರ್ಯಪ್ರವೃತ್ತರಾದ ಜೀವರಕ್ಷಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಓರ್ವನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದರು. ಉಳಿದ ಇಬ್ಬರು ಸಮುದ್ರದಲ್ಲಿ ನಾಪತ್ತೆಯಾಗಿದ್ದರು.
ನಾಪತ್ತೆಯಾದವರಿಗಾಗಿ ಭಾನುವಾರದಿಂದಲೇ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಸೋಮವಾರ ಬೆಳಗ್ಗೆ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಘಟನೆಯಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬಸ್ಥರಲ್ಲಿ ಶೋಕ ಆವರಿಸಿದೆ.
