ಕಾರವಾರ: ಉತ್ತರ ಕನ್ನಡ ಶಿರಸಿ (Sirsi) ನಗರದ ರಾಜೀವ ನಗರದ ಮಸೀದಿ ಎದುರು ನಿಲ್ಲಿಸಿದ್ದ ಆಟೋರಿಕ್ಷಾವೊಂದು ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ.
ನಗರದ ಕೇಂದ್ರ ಬಸ್ ನಿಲ್ದಾಣದ ಬಳಿಯ ಆಟೋ ನಿಲ್ದಾಣದಲ್ಲಿ ಬಾಡಿಗೆ ನಡೆಸುತ್ತಿದ್ದ ತಾಜೀಬ್ ಎಂಬವರಿಗೆ ಸೇರಿದ ರಿಕ್ಷಾ ಇದಾಗಿದೆ. ಎಂದಿನಂತೆ ರಾಜೀವ ನಗರದ ಮಸೀದಿ ಎದುರು ವಾಹನವನ್ನು ನಿಲ್ಲಿಸಿದ್ದ ಸಂದರ್ಭದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಿಂದಾಗಿ ರಿಕ್ಷಾ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಚಾಲಕನಿಗೆ ಅಪಾರ ನಷ್ಟ ಉಂಟಾಗಿದೆ.
ಆಟೋರಿಕ್ಷಾಕ್ಕೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಈ ಘಟನೆಯ ಕುರಿತು ಸಮಗ್ರ ತನಿಖೆ ನಡೆಸುವಂತೆ ಉತ್ತರ ಕನ್ನಡ ಜಿಲ್ಲಾ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಅವರು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.
