– ಬಿಜೆಪಿಯಿಂದ ಪ್ರಜಾಪ್ರಭುತ್ವ ಉಳಿವಿಗಾಗಿ ಪ್ರಬುದ್ಧರ ಸಮಾವೇಶ
ಬೆಳಗಾವಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಅವರು ಇಂದು ಬೆಳಗಾವಿ (Belagavi) ನಗರಕ್ಕೆ ಆಗಮಿಸಲಿದ್ದಾರೆ. ಬಿಜೆಪಿಯಿಂದ ಆಯೋಜಿಸಿರುವ ‘ಪ್ರಜಾಪ್ರಭುತ್ವ ಉಳಿವಿಗಾಗಿ ಪ್ರಬುದ್ಧರ ಸಮಾವೇಶ ಹಾಗೂ ಸಂವಾದ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬೆಳಗಾವಿಗೆ ಆಗಮಿಸುತ್ತಿದ್ದಾರೆ.
ಇಂದು ಮಧ್ಯಾಹ್ನ 2:30ಕ್ಕೆ ಮುಂಬೈನಿಂದ ಬೆಳಗಾವಿಗೆ ಆಗಮಿಸಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಬಳಿಕ ನಗರದ ಧರ್ಮನಾಥ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸಮಾವೇಶಕ್ಕೆ ಚಾಲನೆ ದೊರೆಯಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಂವಾದ ನಡೆಸಲಿದ್ದಾರೆ. ಇದನ್ನೂ ಓದಿ: ಇಂದಿನಿಂದ `ಕಾಶಿ-ತಮಿಳು ಸಂಗಮಂ’ ಅದ್ಧೂರಿ ಸಮಾರಂಭ
ಪ್ರಜಾಪ್ರಭುತ್ವದ ಮೌಲ್ಯಗಳು, ಅದರ ಉಳಿವು ಹಾಗೂ ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಿದ್ಯಮಾನಗಳ ಕುರಿತು ಚರ್ಚೆ ನಡೆಸುವ ಉದ್ದೇಶದಿಂದ ಬಿಜೆಪಿ ಈ ಪ್ರಬುದ್ಧರ ಸಮಾವೇಶವನ್ನು ಆಯೋಜಿಸಿದೆ. ಕಾರ್ಯಕ್ರಮದಲ್ಲಿ ವೈದ್ಯರು, ವಕೀಲರು ಸೇರಿದಂತೆ ಶಿಕ್ಷಣ, ಉದ್ಯಮ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರಬುದ್ಧರು ಭಾಗವಹಿಸಲಿದ್ದಾರೆ.
ಬೆಳಗಾವಿ ಜಿಲ್ಲೆಯ ಬಿಜೆಪಿ ಸಂಸದರು, ಶಾಸಕರು ಹಾಗೂ ಪಕ್ಷದ ಪ್ರಮುಖ ಮುಖಂಡರು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಆಗಮನದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಉತ್ಸಾಹ ಮನೆಮಾಡಿದೆ. ಇದನ್ನೂ ಓದಿ: 12ನೇ ದಿನಕ್ಕೆ ಕಾಲಿಟ್ಟ `ಆಶಾ’ ಹೋರಾಟ – ಮನವೊಲಿಕೆಗೆ ಮತ್ತೊಂದು ಸುತ್ತಿನ ಪ್ರಯತ್ನಕ್ಕೆ ಮುಂದಾದ ಯುಟಿ ಖಾದರ್
ಬೆಳಗಾವಿಯಲ್ಲಿ ನಡೆಯಲಿರುವ ಈ ಪ್ರಬುದ್ಧರ ಸಮಾವೇಶ ರಾಜಕೀಯ ವಲಯದಲ್ಲಿ ಗಮನ ಸೆಳೆದಿದ್ದು, ದೇವೇಂದ್ರ ಫಡ್ನವಿಸ್ ಅವರ ಭಾಷಣ ಹಾಗೂ ಸಂವಾದದಲ್ಲಿ ಅವರು ಯಾವ ವಿಚಾರಗಳನ್ನು ಪ್ರಸ್ತಾಪಿಸಲಿದ್ದಾರೆ ಎಂಬ ಕುತೂಹಲ ಮೂಡಿದೆ.
