– ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ
ಡೆಹ್ರಾಡೂನ್: 12 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾರು (Car) 200ರಿಂದ 300 ಮೀಟರ್ ಆಳದ ಕಂದಕಕ್ಕೆ ಉರುಳಿದ ಪರಿಣಾಮ 7 ಮಂದಿ ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಘಟನೆ ಉತ್ತರಾಖಂಡದ (Uttarakhand) ಪೌರಿ ಗರ್ವಾಲ್ (Pauri Garhwal) ಜಿಲ್ಲೆಯಲ್ಲಿ ನಡೆದಿದೆ.
ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ರಿಖ್ನಿಖಾಲ್ ಪ್ರದೇಶದ ಕಲ್ವಾಡಿ ಬಳಿ ಅಪಘಾತ ನಡೆದಿದೆ. ಲ್ಯಾನ್ಸ್ಡೌನ್ ಉಪವಿಭಾಗಾಧಿಕಾರಿ ಶಾಲಿನಿ ಮೌರ್ಯ ಅವರು ಘಟನೆ ಕುರಿತು ಮಾಹಿತಿ ನೀಡಿದ್ದು, ಅಪಘಾತದಲ್ಲಿ ಆರು ಮಹಿಳೆಯರು ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಐವರು ಮಹಿಳೆಯರನ್ನು ರಕ್ಷಿಸಿ ಸಮೀಪದ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಸಂಧಾನ ಸಕ್ಸಸ್ – 2,000 ರೂ. ಹೆಚ್ಚಳ ಭರವಸೆಗೆ ಒಪ್ಪಿಕೊಂಡ ಆಶಾ ಕಾರ್ಯಕರ್ತೆಯರು
ಪೊಲೀಸರ ಮಾಹಿತಿ ಪ್ರಕಾರ, ಇಕೋ ಕಾರು ರಿಖ್ನಿಖಾಲ್ನಿಂದ ತೆರಳುತ್ತಿದ್ದ ವೇಳೆ ಕಲ್ವಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಆಳವಾದ ಕಂದಕಕ್ಕೆ ಉರುಳಿದೆ. ಅಪಘಾತ ಸಂಭವಿಸಿದ ಸ್ಥಳವು ರಿಖ್ನಿಖಾಲ್ ಪೊಲೀಸ್ ಠಾಣೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿದೆ.
ಮೃತರನ್ನು ಶಾಂತಿ ದೇವಿ, ರೇಖಾ ದೇವಿ (42), ಸುಮಿತ್ರಾ ದೇವಿ (50), ಸುನೀತಾ ದೇವಿ (45), ಧನೇಶ್ವರಿ ದೇವಿ (46), ಸರೋಜಿನಿ ದೇವಿ (28) ಹಾಗೂ ಕಾರು ಚಾಲಕ ಅನಿಲ್ ದೇವ್ರಾಡಾ (45) ಎಂದು ಗುರುತಿಸಲಾಗಿದೆ. ಮೃತಪಟ್ಟ ಆರು ಮಹಿಳೆಯರು ಬ್ಲಾಕ್ ಮಟ್ಟದ ಸ್ವಸಹಾಯ ಸಂಘದ ಸದಸ್ಯರಾಗಿದ್ದರು.
ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದ SDRF:
ಅಪಘಾತದ ಮಾಹಿತಿ ಲಭ್ಯವಾಗುತ್ತಿದ್ದಂತೆ ರಕ್ಷಣಾ ಸಾಮಗ್ರಿಗಳೊಂದಿಗೆ ಎಸ್ಡಿಆರ್ಎಫ್ ತಂಡ ಸ್ಥಳಕ್ಕೆ ಧಾವಿಸಿದೆ. ಆದರೆ ಎಸ್ಡಿಆರ್ಎಫ್ ತಂಡ ಸ್ಥಳಕ್ಕೆ ತಲುಪುವ ಮೊದಲೇ ಜಿಲ್ಲಾ ಪೊಲೀಸರು ಹಾಗೂ ಸ್ಥಳೀಯ ನಿವಾಸಿಗಳು ಗಾಯಗೊಂಡ ಐವರನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದರು.
ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿರುವುದನ್ನು ಎಸ್ಡಿಆರ್ಎಫ್ ತಂಡದ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಕಂದಕದಲ್ಲಿ ಬೇರೆ ಯಾರಾದರೂ ಸಿಲುಕಿದ್ದಾರೆಯೇ ಎಂಬುದನ್ನು ಪರಿಶೀಲಿಸಲು ಎಸ್ಡಿಆರ್ಎಫ್ ತಂಡವು ಜಿಲ್ಲಾ ಪೊಲೀಸರು ಮತ್ತು ಸ್ಥಳೀಯರ ಸಹಕಾರದೊಂದಿಗೆ ಶೋಧ ಕಾರ್ಯಾಚರಣೆ ನಡೆಸಿದೆ. ಇದನ್ನೂ ಓದಿ: ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಬೆಳಗಿದ ಐತಿಹಾಸಿಕ ʻಕಾರ್ತಿಕ ದೀಪʼ – ದಿವ್ಯ ಬೆಳಕು ಕಣ್ತುಂಬಿಕೊಂಡ ಭಕ್ತಗಣ
2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ:
ಪೌರಿ ಗರ್ವಾಲ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿರುವ ಅವರು, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬದ ವಾರಸುದಾರರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕೂಡ ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಗಂಭೀರವಾಗಿ ಗಾಯಗೊಂಡವರನ್ನು ಉನ್ನತ ವೈದ್ಯಕೀಯ ಸೌಲಭ್ಯಗಳಿರುವ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಅಗತ್ಯವಿದ್ದಲ್ಲಿ ಏರ್ಲಿಫ್ಟ್ ವ್ಯವಸ್ಥೆ ಮಾಡುವಂತೆಯೂ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ನನ್ನನ್ನ ಬಂಡೆ ಲೂಟಿಕೋರ ಅಂತಾರೆ, ಆರೋಪ ಮಾಡೋರು ಕನಕಪುರಕ್ಕೆ ಬಂದು ಚುನಾವಣೆಗೆ ಸ್ಪರ್ಧಿಸಲಿ: ಡಿಕೆಶಿ ಸವಾಲ್
