ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಮೃತಪಟ್ಟ ಹಿನ್ನೆಲೆಯಲ್ಲಿ ವೈದ್ಯರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿದ ಘಟನೆ ಆನೇಕಲ್ ತಾಲೂಕಿನಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ದೊಮ್ಮಸಂದ್ರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಹೆರಿಗೆಗಾಗಿ ನೇತ್ರಾವತಿ ಎಂಬ ಮಹಿಳೆ ದಾಖಲಾಗಿದ್ದರು. ಆದರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ್ದರಿಂದ ಹೆರಿಗೆ ಮಾಡಿಸಲು ತಿಣುಕಾಡಿದ ದಾದಿಯರು ವಾಣಿ ವಿಲಾಸ್ ಆಸ್ಪತ್ರೆಗೆ ಹೋಗುವಂತೆ ತಿಳಿಸಿ ಕೈ ತೊಳೆದುಕೊಂಡಿದ್ದರು. ವಾಣಿ ವಿಲಾಸ್ ಗೆ ಹೋಗಲು ದೂರವಾಗಿದ್ದರಿಂದ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಾದಾಗ ತಾಯಿ ಹೊಟ್ಟೆಯಲ್ಲೇ ಮಗು ಮೃತಪಟ್ಟಿರುವು ಗೊತ್ತಾಗಿದೆ.
ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಮೃತಪಟ್ಟಿದೆಯೆಂದು ಆರೋಪಿಸಿ ಆಸ್ಪತ್ರೆ ಮುಂಭಾಗದಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ನೇತ್ರಾವತಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲದ್ದರಿಂದಲೇ ಈ ಎಡವಟ್ಟಾಗಿದೆಯೆಂದು ಆರೋಪಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.