ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ನಡೆಸಿದ ಸಂಪುಟ ವಿಸ್ತರಣೆಯಲ್ಲಿ ಸಮತೋಲನ ಇಲ್ಲ. ಅಲ್ಲದೇ ಸರ್ಕಾರ ರಚನೆಯಾದ 6 ತಿಂಗಳ ಒಳಗೆ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈಬಿಟ್ಟಿದ್ದು ಸರಿಯಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂಪುಟ ವಿಸ್ತರಣೆ ಅಸಮಾಧಾನ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಂಪುಟ ವಿಸ್ತರಣೆ ವೇಳೆ ಒಕ್ಕಲಿಗ ಸಮುದಾಯದವರಿಗೆ ಪ್ರಾತಿನಿಧ್ಯ ಕೊಟ್ಟಿಲ್ಲ. ಒಕ್ಕಲಿಗ ಸಮುದಾಯದಲ್ಲಿ ಡಿಕೆ ಶಿವಕುಮಾರ್ ಮತ್ತು ಕೃಷ್ಣಬೈರೇಗೌಡ ಈ ಇಬ್ಬರೇ ಸಚಿವರಿದ್ದು, ಮತ್ತೊಬ್ಬರಿಗೆ ಅವಕಾಶ ನೀಡಬಹುದಿತ್ತು. ಆದರೆ ಒಕ್ಕಲಿಗ ಸಮುದಾಯದಿಂದ ನನಗೆ ನೀಡಬೇಕು ಎಂದು ಹೇಳುತ್ತಿಲ್ಲ. ನಮ್ಮ ಸಮುದಾಯದವರಾದ ಕೃಷ್ಣಪ್ಪ, ಎಸ್.ಟಿ ಸೋಮಶೇಖರ್ ಇಬ್ಬರ ಪೈಕಿ ಒಬ್ಬರಿಗೆ ಸಚಿವ ಸ್ಥಾನ ಕೊಡಬೇಕಿತ್ತು. ಈ ಬಗ್ಗೆ ಸಚಿವ ಡಿಕೆ ಶಿವಕುಮಾರ್ ಸಹ ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇದೇ ವೇಳೆ ರಮೇಶ್ ಜಾರಕಿಹೊಳಿ ಅವರನ್ನು 6 ತಿಂಗಳಲ್ಲೇ ಸಚಿವ ಸ್ಥಾನದಿಂದ ಕೆಳಗಿಳಿಸಿದ್ದು ಸರಿಯಲ್ಲ. ಸಂಪುಟ ವಿಸ್ತರಣೆಯಲ್ಲಿ ಸಮತೋಲನ ಇಲ್ಲ. ಬಿಜಾಪುರ ಜಿಲ್ಲೆಯಲ್ಲಿ 3 ಜನರಿಗೆ ಸಚಿವ ಸ್ಥಾನ ಕೊಡುವ ಬದಲು ಹಾವೇರಿ, ದಾವಣಗೆರೆಗೆ ಒಂದು ಸ್ಥಾನ ಕೊಡಬಹುದಿತ್ತು. ಅಲ್ಲದೇ ಪಕ್ಷೇತರ ಶಾಸಕರಾದ ಶಂಕರ್ ಅವರನ್ನು ಸಚಿವ ಸ್ಥಾನದಿಂದ ತೆಗೆದಿದ್ದು ಕೂಡ ಸರಿಯಲ್ಲ. ಪಕ್ಷೇತರರಾದ ಕಾರಣ ಶಂಕರ್ ಮತ್ತು ನಾಗೇಶ್ ಇಬ್ಬರಿಗೂ ಮೊದಲೇ ನಿಗಮ ಮಂಡಳಿ ಸ್ಥಾನ ನೀಡಬೇಕಿತ್ತು. ಏಕೆಂದರೆ ಸರ್ಕಾರದ ರಚನೆ ವೇಳೆ ಕಾಂಗ್ರೆಸ್ ಮೈತ್ರಿಗೆ ಬಹುಮತ ಇತ್ತು ಎಂದು ವಾದವನ್ನು ಸಮರ್ಥಿಸಿಕೊಂಡರು.
ಅಸಮಾಧಾನಿತ ಶಾಸಕರನ್ನು ಬಿಜೆಪಿ ಸಂಪರ್ಕ ಮಾಡುವ ವಿಚಾರ ಪ್ರತಿಕ್ರಿಯೆ ನೀಡಿದ ಶಾಸಕ ಸುಧಾಕರ್, ರಾಜ್ಯದ ಮಾಜಿ ಮುಖ್ಯಮಂತ್ರಿಯಾದವರು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ನನಗೆ ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಅಸಮಾಧಾನ ಆಗಿರುವುದು ನಿಜ. ಹಾಗಂತ ನಾನು ಬಿಜೆಪಿಗೆ ಹೋಗುವುದಿಲ್ಲ. ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ. ಹೀಗಾಗಿ ಕಾಂಗ್ರೆಸ್ ತೊರೆಯುವ ಪ್ರಶ್ನೆಯೇ ಇಲ್ಲ. ನನಗೆ ಆಗಿರುವ ಅನ್ಯಾಯದ ಬಗ್ಗೆ ಪಕ್ಷದ ಮಟ್ಟದಲ್ಲಿ ಚರ್ಚೆ ಮಾಡುತ್ತೇನೆ ಎಂದರು.
ನನಗೆ ಆರ್ಹತೆ ಇದೆ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗುವ ಎಲ್ಲ ಅರ್ಹತೆ ತಮಗಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದ ಸುಧಾಕರ್, ನಾನು ಮೆಡಿಕಲ್ ಡಾಕ್ಟರ್ ಆಗಿದ್ದರು ಫೊರೆನ್ಸಿಕ್, ಮೈಕ್ರೋ ಬಯಾಲಜಿ, ಪರಿಸರ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದೇನೆ. ನನಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸ್ಥಾನ ನಿರ್ವಹಣೆ ಮಾಡುವ ಎಲ್ಲ ಅರ್ಹತೆಗಳೂ ಇವೆ. ಹಸಿರು ನ್ಯಾಯಾಧೀಕರಣ ಮಾನದಂಡಗಳಲ್ಲಿ ತಿಳಿಸಿರುವ ಅರ್ಹತೆ ತಮಗಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷಗಿರಿ ಕೊಟ್ಟಿರುವ ಬಗ್ಗೆ ಯಾರಿಗಾದರೂ ಆಕ್ಷೇಪ ಇದರೆ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv