– ದೆಹಲಿ ತಲುಪಿರುವ ರಮೇಶ್ ಜಾರಕಿಹೊಳಿ
ಬೆಂಗಳೂರು: ದೋಸ್ತಿ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರು ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಮುನಿಸಿಕೊಂಡಿದ್ದಾರೆ. ಇದು ಅಪರೇಷನ್ ಕಮಲಕ್ಕೆ ಸಕಾಲವೆಂದು ತಿಳಿದಿರುವ ಬಿಜೆಪಿ ಹೈಕಮಾಂಡ್, ಈ ಕುರಿತು ಚರ್ಚೆ ನಡೆಸಲು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಬುಲಾವ್ ನೀಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬಿ.ಎಸ್.ಯಡಿಯೂರಪ್ಪ ಅವರು ಸದ್ಯ ರಾಯಚೂರು ಜಿಲ್ಲಾ ಪ್ರವಾಸದಲ್ಲಿ ತೊಡಗಿದ್ದು, ಅದನ್ನು ನಿಲ್ಲಿಸಿ ದೆಹಲಿಗೆ ಬರುವಂತೆ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಬೆಂಗಳೂರಿಗೆ ಮರಳಲಿರುವ ಯಡಿಯೂರಪ್ಪ ಅವರು ಇಂದು ಅಥವಾ ನಾಳೆ ದೆಹಲಿಗೆ ತೆರಳುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಈಗಾಗಲೇ ದೆಹಲಿಗೆ ತೆರಳಿದ್ದು, ಬಿಜೆಪಿ ನಾಯಕರ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಇತ್ತ ಬಿ.ಎಸ್.ಯಡಿಯೂರಪ್ಪ ಬಂಡಾಯ ಕಾಂಗ್ರೆಸ್ ಶಾಸಕರ ಪಟ್ಟಿ ಹಿಡಿದು ದೆಹಲಿಗೆ ಹೋಗಲಿದ್ದಾರಂತೆ. ಈ ಮೂಲಕ ರಮೇಶ್ ಜಾರಕಿಹೊಳಿ ಹಾಗೂ ಬೆಂಬಲಿಗರಾದ ನಾಗೇಂದ್ರ, ಅಜಯ್ ಸಿಂಗ್, ಭೀಮಾನಾಯಕ್, ಆನಂದ್ ಸಿಂಗ್ ಸೇರಿದಂತೆ ಕೆಲವು ಶಾಸಕರನ್ನು ಪಕ್ಷಕ್ಕೆ ಆಹ್ವಾನಿಸಲು ಅಮಿತ್ ಶಾ ಹಾಗೂ ಬಿ.ಎಸ್.ಯಡಿಯೂರಪ್ಪ ಪ್ಲಾನ್ ರೂಪಿಸಲಿದ್ದಾರೆ ಎನ್ನಲಾಗಿದೆ.
ಸಚಿವ ಸಂಪುಟ ವಿಸ್ತರಣೆ ಬಳಿಕ ರಾಜ್ಯ ಕಾಂಗ್ರೆಸ್ ನಾಯಕರೇ ಪರಸ್ಪರ ಕಿತ್ತಾಟ ನಡೆಸಿದ್ದಾರೆ. ಖಾತೆ ಹಂಚಿಕೆ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ವಾಗ್ದಾಳಿ ನಡೆಸಿದ್ದು ಭಾರೀ ಚರ್ಚೆಯಾಗಿತ್ತು. ಸಿದ್ದರಾಮಯ್ಯ ಅವರ ನಡೆಯಿಂದ ಬೇಸತ್ತ ಸಿಎಂ ಕುಮಾರಸ್ವಾಮಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೂರು ನೀಡಲು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv