ಸಿಎಲ್‍ಪಿ ಸಭೆಗೆ ಗೈರಾಗುವ ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್‌ಗೆ ಶಿಫಾರಸ್ಸು: ಸಿದ್ದರಾಮಯ್ಯ

Public TV
2 Min Read
Singh siddaramaiah

– ಪಕ್ಷದ ಶಾಸಕ ವಿರುದ್ಧ ಮತ್ತೆ ಅಸಮಾಧಾನ ಹೊರಹಾಕಿದ ದಿನೇಶ್ ಗುಂಡೂರಾವ್

ಬೆಂಗಳೂರು: ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಮತ್ತೊಂದು ಪ್ರಯತ್ನ ನಡೆಸಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‍ಪಿ) ಸಭೆಯನ್ನು ಫೆಬ್ರವರಿ 8ರಂದು ಮಾಜಿ ಸಿಎಂ ಸಿದ್ದರಾಮಯ್ಯ ಕರೆದಿದ್ದಾರೆ.

ಅರಮನೆ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ, ಈ ಬಾರಿಯ ಸಿಎಲ್‍ಪಿ ಸಭೆಗೆ ಎಲ್ಲಾ ಶಾಸಕರು ಹಾಜರಾಗಲೇಬೇಕು. ಒಂದು ವೇಳೆ ಸಭೆಗೆ ಗೈರಾದರೆ ಅಂತಹ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಶಿಫಾರಸ್ಸು ಸಲ್ಲಿಸುತ್ತೇವೆ ಎಂದು ಖಡಕ್ ಸಂದೇಶ ನೀಡಿದ್ದಾರೆ.

dinesh gundu rao

ನಿನ್ನೆ ಪಕ್ಷದ ಶಾಸಕರೊಬ್ಬರ ಮನೆಗೆ 30 ಕೋಟಿ ರೂ. ಹಣದೊಂದಿಗೆ ಬಿಜೆಪಿಯ ನಾಯಕರುಗಳು ಬಂದಿದ್ದರು. ಆದರೆ ನಮ್ಮ ಶಾಸಕರು ಹಣವನ್ನು ತಗೆದುಕೊಳ್ಳದೆ ವಾಪಾಸ್ ಕಳುಹಿಸಿದ್ದಾರೆ. ಈ ಕುರಿತು ಶಾಸಕರು ನನ್ನ ಬಳಿ ಇಂದು ಹೇಳಿಕೊಂಡಿದ್ದಾರೆ ಎಂದು ಹೆಸರನ್ನು ಹೇಳದೆ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದರು.

ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಮೈತ್ರಿ ಸರ್ಕಾರದಲ್ಲಿ ಜವಾಬ್ದಾರಿಯಿಂದ ಹೇಳಿಕೆ ಕೊಡಬೇಕು. ಶಿಸ್ತು ಮೀರಿ ಹೋಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಣದ ಶಾಸಕರು ಹಾಗೂ ಅತೃಪ್ತ ಶಾಸಕರ ವಿರುದ್ಧ ಮತ್ತೆ ಅಸಮಾಧಾನ ಹೊರಹಾಕಿದರು.

Congress Meeting

ಸಿದ್ದಗಂಗಾ ಶ್ರೀಗಳಿಗೆ ಮರಣೋತ್ತರ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು. ಬಡವರ ಪರ ಕಾರ್ಯಕ್ರಮಕ್ಕೆ ಹೆಚ್ಚು ಒತ್ತು ನೀಡುವುದು ಹಾಗೂ ಪಕ್ಷದ ಪ್ರಧಾನಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ನೇಮಕವಾಗಿದ್ದಕ್ಕೆ ಅಭಿನಂದನೆ ಸಲ್ಲಿಸುವ ಠರಾವುಗಳನ್ನು ಸಭೆಯಲ್ಲಿ ಮಂಡಿಸಿದ್ದೇವೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ಜೆಡಿಎಸ್ ಜೊತೆಗೆ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆದಿದೆ. ಪಕ್ಷದ ನಾಯಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಲ್ಲಿಯೇ ಚುನಾವಣೆ ಎದುರಿಸುತ್ತೇವೆ. ಇದನ್ನು ಕಾರ್ಯಕರ್ತರು ಅರಿತುಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು.

MND JDS CONGRESS

ಲೋಕಸಭಾ ಚುನಾವಣೆ ಹಿನ್ನೆಲೆ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ. ಜನಸಂಪರ್ಕ ಅಭಿಯಾನವು ಫೆಬ್ರವರಿ 15 ರಿಂದ ಆರಂಭವಾಗಲಿದೆ. ಅಷ್ಟೇ ಅಲ್ಲದೆ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಶಿಬಿರ ಆಯೋಜನೆ ಮಾಡಲಾಗಿದೆ. ಈ ಮೂಲಕ ಬಿಜೆಪಿಯ ಸಿದ್ಧಾಂತಗಳನ್ನು ಸಮರ್ಪಕವಾಗಿ ಎದುರಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *