ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಗೆ ಜೆಡಿಎಸ್ ಜಿಲ್ಲಾಧ್ಯಕ್ಷರೇ ಕಂಟಕ!

Public TV
1 Min Read
SMG JDS district President

– ತೀರ್ಥಹಳ್ಳಿ ತಾಲೂಕು ಜೆಡಿಎಸ್ ಅಧ್ಯಕ್ಷ ಸೇರಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

ಶಿವಮೊಗ್ಗ: ಕಾಂಗ್ರೆಸ್ ಟ್ರಬಲ್ ಶೂಟರ್, ಬೃಹತ್ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಚರಿಸಿ ಉಭಯ ಪಕ್ಷಗಳ ನಾಯಕರು ಒಟ್ಟಿಗೆ ಹೋಗುವಂತೆ ಖಡಕ್ ಎಚ್ಚರಿಕೆ ಕೊಟ್ಟು ಹೋಗಿದ್ದಾರೆ. ಆದರೂ ದೋಸ್ತಿ ಕಾರ್ಯಕರ್ತರಲ್ಲಿ ಸಮಸ್ಯೆ ಉಲ್ಬಣಗೊಂಡಿದ್ದು, ತೀರ್ಥಹಳ್ಳಿ ತಾಲೂಕು ಜೆಡಿಎಸ್ ಅಧ್ಯಕ್ಷರಾಗಿದ್ದ ಮದನ್ ಹಾಗೂ ಇನ್ನಿತರ ಪದಾಧಿಕಾರಿಗಳು ಸಾಮೂಹಿಕವಾಗಿ ತಮ್ಮ ಸ್ಥಾನಗಳಿಗೆ ಹಾಗೂ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ತಾಲೂಕು ಘಟಕದ 25ಕ್ಕೂ ಹೆಚ್ಚು ಪದಾಧಿಕಾರಿಗಳಿಂದ ಪಕ್ಷದ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ ಕಳುಹಿಸಿದ್ದಾರೆ. ಮದನ್ ಅವರು ಶಾಂತವೇರಿ ಗೋಪಾಲ ಗೌಡರ ಮೊಮ್ಮಗನಾಗಿದ್ದು, ಈ ಭಾಗದಲ್ಲಿ ಜೆಡಿಎಸ್ ಬೆಳೆಯಲು ಮುಖ್ಯ ಕಾರಣರಾಗಿದ್ದರು. 2013ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಫೈಟ್ ಕೊಟ್ಟಿದ್ದರು. ಆದರೆ ಇತ್ತೀಚೆಗೆ ಜೆಡಿಎಸ್ ಸೇರಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಜೆಡಿಎಸ್ ಅಧ್ಯಕ್ಷ ಸ್ಥಾನ ಪಡೆದ ನಂತರ ಮೂಲ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ ಎಂಬುದು ಮದನ್ ಆರೋಪವಾಗಿದೆ.

JDS Thirthahalli

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜೀನಾಮೆ ನೀಡಿದ ಕಾರ್ಯಕರ್ತರು, ಈ ಬಾರಿಯ ಲೋಕಸಭಾ ಉಪ ಚುನಾವಣೆಯಲ್ಲೂ ಮದನ್ ಹಾಗೂ ಅವರ ಬೆಂಬಲಿಗರನ್ನು ಮೂಲೆಗುಂಪು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವೇಳೆ ಮಾತನಾಡಿದ ಮದನ್ ಅವರು, ಆರ್.ಎಂ.ಮಂಜುನಾಥ ಗೌಡರು ಅನಿರೀಕ್ಷಿತವಾಗಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ನಂತರ ನನ್ನ ಮತ್ತು ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರ ಮೇಲೆ ಹಗೆ ತೀರಿಸಿಕೊಳ್ಳುತ್ತಿದ್ದಾರೆ. ವ್ಯವಸ್ಥಿತವಾಗಿ ನಮ್ಮನ್ನು ಮೂಲೆಗುಂಪು ಮಾಡುವಲ್ಲಿ ಯಶಸ್ವಿ ಆಗಿದ್ದಾರೆ. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಮಾಹಿತಿ ನೀಡಿದರೂ ಯಾವುದೇ ರೀತಿಯ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇವೆ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ತಟಸ್ಥರಾಗಿ ಇರಲಿದ್ದೇವೆ ಎಂದು ಘೋಷಿಸಿದರು.

JDS Madan

Share This Article
Leave a Comment

Leave a Reply

Your email address will not be published. Required fields are marked *