ಚಿದಂಬರಂ ನಾಪತ್ತೆ : ಬಂಧಿಸಲು ಹೋಗಿದ್ದ ಸಿಬಿಐ ಅಧಿಕಾರಿಗಳು ಬರಿಗೈಯಲ್ಲಿ ವಾಪಸ್

Public TV
2 Min Read
P Chidambaram Home

ನವದೆಹಲಿ: ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಈ ಬೆನ್ನಲ್ಲೇ ಅವರನ್ನು ಬಂಧಿಸಲು ಮನೆಗೆ ಹೋಗಿದ್ದ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ತಂಡವು ಬರಿಗೈಲಿ ವಾಪಸ್ ಬಂದಿದ್ದಾರೆ.

ಐಎನ್‍ಎಕ್ಸ್ ಮೀಡಿಯಾ ಅವ್ಯವಹಾರ ಹಗರಣ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಮಾಜಿ ಕೆಂದ್ರ ಸಚಿವ ಪಿ. ಚಿದಂಬರಂ ಅವರು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಮೂರ್ತಿ ಸುನಿಲ್ ಗೌರ್ ಅವರು ಅರ್ಜಿಯನ್ನು ವಜಾಗೊಳಿಸಿದರು. ಇದರಿಂದಾಗಿ ಪಿ.ಚಿದಂಬರಂ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ಭೇಟಿಯಾಗಿ, ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಪಿ ಚಿದಂಬರಂ ಅವರು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಭಾರೀ ಪ್ರಮಾಣದಲ್ಲಿ ಆರ್ಥಿಕ ಅಪರಾಧವನ್ನು  ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಅವರ ವಿರುದ್ಧ ಪ್ರಬಲ ಸಾಕ್ಷ್ಯಗಳಿರುವುದರಿಂದ ನಿರೀಕ್ಷಣಾ ಜಾಮೀನು ನೀಡುವುದು ಸಾಧ್ಯವಿಲ್ಲ ಎಂದು ಹೇಳಿ ದೆಹಲಿ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ಪ್ರಕಟಿಸಿತ್ತು.

ದೆಹಲಿ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸುತ್ತಿದ್ದಂತೆ ಸಿಬಿಐ ಅಧಿಕಾರಿಗಳು ಮಾಜಿ ಸಚಿವರ ನಿವಾಸಕ್ಕೆ ತೆರಳಿದ್ದರು. ಬಳಿಕ ಇಡಿಯ ಇಬ್ಬರು ಅಧಿಕಾರಿಗಳು ಕೂಡ ಹೋಗಿದ್ದರು. ಆದರೆ ಚಿದಂಬರಂ ಅವರು ಮನೆಯಲ್ಲಿ ಇರಲಿಲ್ಲ. ಅಷ್ಟೇ ಅಲ್ಲದೆ ಅವರ ಮೊಬೈಲ್‍ಗೆ ಕರೆ ಮಾಡಿದರೆ ಸ್ವಿಚ್ ಆಫ್ ಆಗಿತ್ತು. ಅಧಿಕಾರಿಗಳು ಮನೆಯ ಬಾಗಿಲಿಗೆ ನೋಟಿಸ್ ಅಂಟಿಸಿ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿದ್ದಾರೆ.  ಅಧಿಕಾರಿಗಳು ಬರಿಗೈಯಲ್ಲಿ ವಾಪಸ್ ಆಗಿದ್ದು, ಚಿದಂಬರಂ ಅವರ ಪತ್ತೆಗಾಗಿ ಕಾರ್ಯಾಚರಣೆ ಆರಂಭವಾಗಿದೆ.

ಚಿದಂಬರಂ ಅವರು 2007ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶ ಬಂಡವಾಳ ಹೂಡಿಕೆ ಪ್ರೋತ್ಸಾಹಕ ಮಂಡಳಿ (ಎಫ್‍ಐಪಿಬಿ)ಯ ಅನುಮೋದನೆ ಸಿಕ್ಕಿತ್ತು. ಈ ಮೂಲಕ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ 305 ಕೋಟಿ ರೂ. ಮೊತ್ತದಷ್ಟು ವಿದೇಶಿ ಬಂಡವಾಳ ಹೂಡಿಕೆ ಲಭ್ಯವಾಗಿತ್ತು. ಆದರೆ ಪುತ್ರ ಕಾರ್ತಿ ಚಿದಂಬರಂ ಶಿಫಾರಸಿನ ಮೇಲೆ ಈ ಅನುಮೋದನೆಯನ್ನು ಚಿದಂಬರಂ ದೊರಕಿಸಿಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಸಿಬಿಐ, 2017ರಲ್ಲಿ ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಮತ್ತಿತರರ ವಿರುದ್ಧ ಎಫ್‍ಐಆರ್ ದಾಖಲಿಸಿತ್ತು.

ಚಿದಂಬರಂ ಅವರು ವಿಚಾರಣೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ಅವರನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುವುದು ಅಗತ್ಯವಿದೆ. ಹೀಗಾಗಿ ಅವರಿಗೆ ಜಾಮೀನು ನೀಡಬೇಡಿ ಎಂದು ಸಿಬಿಐ ಮತ್ತು ಜಾರಿ ನಿರ್ದೇಶನಾಲಯವು ಕೋರ್ಟ್ ಗೆ ಮನವಿ ಮಾಡಿಕೊಂಡಿತ್ತು. ಇದರಿಂದಾಗಿ ಚಿದಂಬರಂ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *