ಡಿಕೆಶಿ ಆಪ್ತೆ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ಗೆ ಇಡಿಯಿಂದ ಸಮನ್ಸ್

Public TV
2 Min Read
DKShi lakshi hebbalakar

ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಜಾರಿ ನಿರ್ದೇಶನಾಲಯ ಮೌಖಿಕ ಸಮನ್ಸ್ ನೀಡಿದೆ.

ಅಕ್ರಮ ಹಣಕಾಸು ವ್ಯವಹಾರದ ಸಂಬಂಧ ಇಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಇತ್ತ ಮಾಜಿ ಸಚಿವರ ಪುತ್ರಿ ಐಶ್ವರ್ಯಾ ಕೂಡ ವಿಚಾರಣೆಗೆ ಹಾಜರಾಗಿದ್ದಾರೆ. ಈ ಬೆನ್ನಲ್ಲೇ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಇಡಿ ಅಧಿಕಾರಿಗಳು  ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ಇದನ್ನೂ ಓದಿ: ಡಿಕೆಶಿ 317 ಖಾತೆ, 800 ಕೋಟಿ ಆಸ್ತಿ ಪತ್ತೆ

ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ನನಗೆ ಇಡಿ ಸಮನ್ಸ್ ನೀಡಿರುವುದು ನಿಜ. ಸಾಕ್ಷಿಯಾಗಿ ಹೇಳಿಕೆ ನೀಡುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 14ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಆದರೆ ನನಗೆ ಬರುವುದಕ್ಕೆ ಆಗುವುದಿಲ್ಲ, ಸೆಪ್ಟೆಂಬರ್ 18ರಂದು ವಿಚಾರಣೆಗೆ ಹಾಜರಾಗುತ್ತೇನೆ ಅಂತ ಮನವಿ ಮಾಡಿಕೊಂಡಿದ್ದೆ. ಖಂಡಿತವಾಗಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: 78 ಕೋಟಿ ಹೂಡಿಕೆ – ಐಶ್ವರ್ಯ ಶಿವಕುಮಾರ್‌ಗೆ ಇಡಿ ಸಮನ್ಸ್

lakshmi

ಏನಿದು ಪ್ರಕರಣ?
2017ರ ಆಗಸ್ಟ್ 2 ರಂದು ದೆಹಲಿಯ ಡಿಕೆ ಶಿವಕುಮಾರ್ ಆಪ್ತರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದಾಗ ದಾಖಲೆ ಇಲ್ಲದ 8.59 ಕೋಟಿ ರೂ. ಹಣ ಪತ್ತೆಯಾಗಿತ್ತು. ವಿಚಾರಣೆ ವೇಳೆ ಡಿಕೆಶಿ ಸುಳ್ಳು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಐಟಿ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಅಪಾರ್ಟ್ ಮೆಂಟ್‍ನಲ್ಲಿ ಪತ್ತೆ ಹಣದ ಜತೆಗೆ ಹವಾಲಾ ಮೂಲಕ ಏಜೆಂಟ್‍ಗಳ ಸಹಾಯದಿಂದ ಡಿಕೆ ಶಿವಕುಮಾರ್ ಕೋಟ್ಯಂತರ ರೂ.ಗಳನ್ನು ಕಾಂಗ್ರೆಸ್ ಹೈಕಮಾಂಡ್‍ಗೆ ನೀಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ನೋಟು ನಿಷೇಧಗೊಂಡ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ಸಾವಿರಾರು ಕೋಟಿ ರೂ.ಗಳನ್ನು ಬದಲಾಯಿಸಿದ್ದಾರೆ. ಆಪ್ತರ ಮೂಲಕ ಕಪ್ಪುಹಣವನ್ನು ಬಿಳಿಯಾಗಿ ಪರಿವರ್ತಿಸಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. ವಿದೇಶದಲ್ಲೂ ಡಿಕೆಶಿ ಹಣವನ್ನು ಹೂಡಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಈ ಸಮನ್ಸ್ ರದ್ದು ಪಡಿಸುವಂತೆ ಕೋರಿ ಡಿಕೆ ಶಿವಕುಮಾರ್ ಹೈ ಕೋರ್ಟ್ ಮೊರೆ ಹೋಗಿದ್ದರು. ಡಿಕೆ ಶಿವಕುಮಾರ್ ಅವರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಇಡಿ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿತ್ತು.

ವಿಚಾರಣೆಗೆ ಹಾಜರಾಗಿದ್ದ ಡಿಕೆ ಶಿವಕುಮಾರ್ ಅವರನ್ನು ಸತತ ನಾಲ್ಕು ದಿನಗಳ ಕಾಲ ವಿಚಾರಣೆ ನಡೆಸಿದ್ದ ಇಡಿ, ಸೆಪ್ಟೆಂಬರ್ 3ರಂದು ರಾತ್ರಿ 8.20 ಗಂಟೆಗೆ ಮಾಜಿ ಸಚಿವರನ್ನು ಬಂಧಿಸಿತ್ತು. ಈ ವೇಳೆ ಇಡಿ ಕಚೇರಿಯ ಮುಂದೆ ಹೈಡ್ರಾಮಾ ನಡೆದಿತ್ತು. ಡಿ.ಕೆ.ಶಿವಕುಮಾರ್ ಅವರ ಬಂಧನ ಖಂಡಿಸಿ ರಾಜ್ಯದಲ್ಲಿ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದವು.

Share This Article
Leave a Comment

Leave a Reply

Your email address will not be published. Required fields are marked *