ಮಸ್ಕಿ, ಆರ್‌ಆರ್‌ ನಗರ ಕ್ಷೇತ್ರಕ್ಕೆ ಯಾಕಿಲ್ಲ ಎಲೆಕ್ಷನ್? – ಸಂಜೀವ್ ಕುಮಾರ್ ಸ್ಪಷ್ಟನೆ

Public TV
1 Min Read
Sanjeev Kumar a

ಬೆಂಗಳೂರು: ಅನರ್ಹ ಶಾಸಕರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ಇಂದು ರಾಜ್ಯ ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್ ಸುದ್ದಿಗೋಷ್ಠಿ ಕರೆದರು. ಅನರ್ಹ ಶಾಸಕರ 17 ಕ್ಷೇತ್ರದ ಪೈಕಿ ಆರ್ ಆರ್ ನಗರ ಹಾಗೂ ಮಸ್ಕಿ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗದ ಬಗ್ಗೆ ಸ್ಪಷ್ಟನೆಯನ್ನು ನೀಡಿದರು.

ಕಳೆದ 2018 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜಾಲಹಳ್ಳಿಯ ಅಪಾರ್ಟ್ ಮೆಂಟ್ ಒಂದರಲ್ಲಿ ಸಾವಿರಾರು ಗುರುತಿನ ಚೀಟಿ ಪತ್ತೆಯಾಗಿದ್ದವು. ಈ ಪ್ರಕರಣದಲ್ಲಿ ಅನರ್ಹ ಶಾಸಕ ಮುನಿರತ್ನ ಹೆಸರನ್ನು ಜಾಲಹಳ್ಳಿ ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಕೈಬಿಟ್ಟಿದ್ದರು. ಇದನ್ನು ಪ್ರಶ್ನಿಸಿ ಪರಾಜಿತ ಅಭ್ಯರ್ಥಿ ಪಿ.ಎಂ ಮುನಿರಾಜುಗೌಡ 7ನೇ ಎಸಿಎಂಎಂ ನ್ಯಾಯಾಲಯದ ಮೆಟ್ಟಿಲೇರಿದ್ದರು. ಮುನಿರತ್ನ ಅವರನ್ನು ಆರೋಪಿಯನ್ನಾಗಿ ಮಾಡಬೇಕು ಎಂಬುವುದು ಅವರ ವಾದವಾಗಿದೆ. ಈ ಪ್ರಕರಣ ಕೋರ್ಟಿನಲ್ಲಿ ಇರುವುದರಿಂದ ಈ ಕ್ಷೇತ್ರದ ಉಪ ಚುನಾವಣೆ ತಡೆಹಿಡಿಯಲಾಗಿದೆ ಎಂದು ಚುನಾವಣಾಧಿಕಾರಿ ಹೇಳಿದರು.

Pratap gowda patil

ಇನ್ನು ಬೋಗಸ್ ಮತದಾನ ಪ್ರಕರಣ ಮಸ್ಕಿ ಕ್ಷೇತ್ರಕ್ಕೆ ಉಪಚುನಾವಣೆಯಿಲ್ಲ. ಪ್ರತಾಪ್ ಗೌಡ ಪಾಟೀಲ್ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿ 213 ಮತದ ಅಂತರದಿಂದ ಸೋತಿದ್ದ ಬಸನಗೌಡ ತುರ್ವಿಹಾಳ ಅವರು ಕೋರ್ಟಿನಲ್ಲಿ ದೂರು ದಾಖಲಿಸಿದ್ದಾರೆ. ಪ್ರತಾಪ್ ಗೌಡ ಪುತ್ರಿ ವಿದೇಶದಲ್ಲಿದ್ದರು ಕೂಡ ಅವರ ಮತ ಚಲಾವಣೆಯಾಗಿತ್ತು. ಹೀಗಾಗಿ ಶಾಸಕತ್ವ ಅಸಿಂಧುಗೊಳಿಸುವಂತೆ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲಾಗಿದೆ. ಉಚ್ಚ ನ್ಯಾಯಾಲಯದಲ್ಲಿ ಈ ಪ್ರಕರಣ ಬಾಕಿಯಿದ್ದು, ಬೋಗಸ್ ಮತದಾನ ನಡೆಯದಿದ್ದರೆ ನಾನೇ ಗೆಲ್ಲುತ್ತಿದ್ದೆ ಎಂಬುವುದು ಬಸನಗೌಡ ತುರ್ವಿಹಾಳ ವಾದವಾಗಿದೆ. ಹೀಗಾಗಿ ಎರಡು ಪ್ರಕರಣ ಕೋರ್ಟಿನಲ್ಲಿ ಇರುವ ಕಾರಣದಿಂದ 2 ಕ್ಷೇತ್ರಗಳ ಉಪಚುನಾವಣೆ ಕೋರ್ಟ್ ತೀರ್ಪು ಬರುವವರೆಗೂ ಕೈ ಬಿಡಲಾಗಿದೆ.

ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಿಗೆ ಅ.21 ರಂದು ಮತದಾನ ನಡೆಯಲಿದ್ದು ಅ.24 ರಂದು ಮತ ಎಣಿಕೆ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *