ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ ದಸರಾಗೆ ಎಸ್.ಎಲ್ ಭೈರಪ್ಪ ಚಾಲನೆ

Public TV
2 Min Read
mys dasara

ಮೈಸೂರು: ಇಂದು ಸಾಹಿತಿ ಎಸ್.ಎಲ್. ಭೈರಪ್ಪ ಅವರು ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ಅಧಿಕೃತ ಚಾಲನೆ ಕೊಟ್ಟಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ 2019ರ ದಸರಾ ಉತ್ಸವಕ್ಕೆ ಭೈರಪ್ಪ ಅವರು ಚಾಲನೆ ನೀಡಿದ್ದಾರೆ. ಈ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಕೇಂದ್ರ ಸಚಿವ ಸದಾನಂದ ಗೌಡ, ಜೆಡಿಎಸ್ ನಾಯಕ ಜಿ.ಟಿ ದೇವೇಗೌಡ, ಸಚಿವ ವಿ. ಸೋಮಣ್ಣ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಭಾಗಿಯಾಗಿದ್ದು, ಸಾಂಸ್ಕೃತಿಕ ನಾಡಿನಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ.

mys dasara 1

ಇಂದಿನಿಂದ ಹತ್ತು ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ಷರಶಃ ಧಾರ್ಮಿಕ, ಪಾರಂಪರಿಕ, ಸಾಂಸ್ಕೃತಿಕ ಹಾಗೂ ಮನರಂಜನೆ ಪೂರಿತ ವಾತಾವರಣ ನಿರ್ಮಾಣವಾಗಲಿದೆ. ವಿಶ್ವವನ್ನೇ ತನ್ನತ್ತ ಸೆಳೆದುಕೊಂಡು ತನ್ನ ವೈವಿಧ್ಯಮಯವಾದ ಆಚರಣೆಗಳನ್ನು ಜಗತ್ತಿಗೆ ತೋರ್ಪಡಿಸುವ ಆಚರಣೆ ಅಂದರೆ ಅದೇ ಮೈಸೂರು ದಸರಾ ಮಹೋತ್ಸವ.

mys dasara 3 1

ಅರಮನೆಯಲ್ಲಿ ರಾಜಪರಂಪರೆಯ ನವರಾತ್ರಿ ಉತ್ಸವಕ್ಕೂ ಇವತ್ತು ಚಾಲನೆ ಸಿಗಲಿದೆ. ಬೆಳಗ್ಗೆ 5:10 ರಿಂದ 5:30ರ ನಡುವೆ ರತ್ನಖಚಿತ ಆಸನಕ್ಕೆ ಸಿಂಹ ಜೋಡಣೆ ಮಾಡಲಾತ್ತದೆ. ಬೆಳಗ್ಗೆ 8:05 ರಿಂದ 8:55ರ ನಡುವೆ ಅರಮನೆ ಒಳ ಆವರಣದ ಚಾಮುಂಡಿ ತೊಟ್ಟಿಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‍ಗೆ ಕಂಕಣಧಾರಣೆ ಮಾಡಲಾಗುತ್ತದೆ. ಬೆಳಗ್ಗೆ 9:30ಕ್ಕೆ ಅರಮನೆಯ ಸವಾರಿ ತೊಟ್ಟಿಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಆಗಮಿಸಲಿದ್ದು, ಬೆಳಗ್ಗೆ 9:50 ರಿಂದ 10:35 ಕಳಸ ಪೂಜೆ ನೆರವೆರಿಸಲಾಗುತ್ತದೆ. ನಂತರ ಸಿಂಹಾಸನರೋಹಣ ಮಾಡುವ ಮೂಲಕ ಖಾಸಗಿ ದರ್ಬಾರ್ ನಡೆಯಲಿದೆ. ಬಳಿಕ ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ಚಾಮುಂಡೇಶ್ವರಿ ತರಲಾಗುವುದು. ಈ ಮೂಲಕ ಮೊದಲ ದಿನದ ಅರಮನೆ ಕಾರ್ಯಕ್ರಮ ಮುಕ್ತಾಯವಾಗುತ್ತದೆ.

mys dasara 2 1

ಇಂದಿನಿಂದ 10 ದಿನಗಳ ಕಾಲ ಮೈಸೂರು ವಿದ್ಯುತ್ ಅಲಂಕಾರದಿಂದ ಕಂಗೊಳಿಸುತ್ತಿರುತ್ತದೆ. ಅರಮನೆ ಸೇರಿದಂತೆ ಐತಿಹಾಸಿಕ ಕಟ್ಟಡಗಳು, ಸರ್ಕಾರಿ ಕಟ್ಟಡಗಳು ಹಾಗೂ ಮೈಸೂರಿನ ಬಹುಪಾಲು ರಸ್ತೆಗಳು ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿರುತ್ತವೆ. ಜೊತೆಗೆ ಕುಸ್ತಿ, ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಸಾಹಸ ಕ್ರೀಡೆಗಳು, ಚಲನಚಿತ್ರೋತ್ಸವ, ವಸ್ತು ಪ್ರದರ್ಶನ, ಪುಸ್ತಕ ಮೇಳ, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ದಸರಾಗೆ ಮತ್ತಷ್ಟು ರಂಗು ತುಂಬಲಿವೆ.

Share This Article
Leave a Comment

Leave a Reply

Your email address will not be published. Required fields are marked *