ದೇವರು, ಗುರುಗಳು, ತಂದೆ-ತಾಯಿಯ ವ್ಯತ್ಯಾಸ ಗೊತ್ತಿಲ್ಲದ ರಾಕ್ಷಸರನ್ನು ದೇವರೇ ಶಿಕ್ಷಿಸಲಿ: ಡಿವಿಎಸ್

Public TV
1 Min Read
DV SADANANDA GOWDA

ಬೆಂಗಳೂರು: ಫೋನ್ ಕದ್ದಾಲಿಕೆ ಯಾರೇ ಮಾಡಿರಲಿ ಅವರು ಸಾರ್ವಜನಿಕ ಜೀವನದಲ್ಲಿ ಇರಲು ಅರ್ಹರಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸಚಿವ ಡಿ.ವಿ ಸದಾನಂದಗೌಡ ಅವರು ಟ್ವೀಟ್ ಮಾಡಿದ್ದಾರೆ.

ಸದಾನಂದಗೌಡ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕೆಲ ಸಮಯದ ಹಿಂದೆ ಗುರು ಪೀಠ ಶ್ರೀ ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ಫೋನ್ ಕದ್ದಾಲಿಕೆ ನಡೆದಿದೆ ಎನ್ನುವ ಮಾಧ್ಯಮ ವರದಿಗಳು ಆಘಾತಕಾರಿಯಾದದ್ದು. ಅಂತಹ ಕೆಲಸ ಯಾರೇ ಮಾಡಿರಲಿ ಅವರು ಸಾರ್ವಜನಿಕ ಜೀವನದಲ್ಲಿ ಇರಲು ಅರ್ಹರಲ್ಲ. ದೇವರು, ಗುರುಗಳು, ತಂದೆ ತಾಯಿಯ ವ್ಯತ್ಯಾಸ ಗೊತ್ತಿಲ್ಲದ ರಾಕ್ಷಸರನ್ನು ದೇವರೇ ಶಿಕ್ಷಿಸಲಿ” ಎಂದು ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡುವುದರ ಮೂಲಕ ತನ್ನ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದರು. ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರಿನಲ್ಲಿ, ನನ್ನ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ ಎಂದಿದ್ದಾರೆ.

ಈ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪಿಸಲಾಗಿದೆ. ಸಂಭವಿಸದ ತಪ್ಪೊಂದಕ್ಕೆ ಅಶೋಕ್ ಅವರು ಎಲ್ಲರಿಗಿಂತಲೂ ಮುಂದೆ ಹೋಗಿ ಕ್ಷಮೆ ಕೇಳಿದ್ದಾರೆ. ಇದರಿಂದ ಅವರಿಗೇನು ಲಾಭವೋ ಗೊತ್ತಿಲ್ಲ. ಅವರ ಆತುರಕ್ಕೆ ಮರುಕವಿದೆ. ಅದೇ ಹೊತ್ತಲ್ಲೇ ಶ್ರೀಗಳಿಗಾಗುತ್ತಿರುವ ಬೇಸರಕ್ಕೆ ಅತೀವ ನೋವಿದೆ ಎಂದು ಹೇಳಿಕೊಂಡಿದ್ದಾರೆ.

ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದವರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದವರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದವರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ ಎಂದು ಮಾಜಿ ಸಿಎಂ ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *