ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮುಂದೂಡಿಕೆಯಾಗಿದೆ. ಪ್ರಾದೇಶಿಕ ಆಯುಕ್ತರಿಗೆ ನಗರಾಭಿವೃದ್ಧಿ ಇಲಾಖೆಯಿಂದ ಅಧಿಕೃತವಾಗಿ ಸೂಚನೆ ರವಾನೆಯಾಗಿದ್ದು ಚುನಾವಣೆ ಮುಂದೂಡಿಕೆಯಾಗಿದೆ.
ನಗರಾಭಿವೃದ್ಧಿ ಇಲಾಖೆಯ ಅಪರ ಕಾರ್ಯದರ್ಶಿ ವಿಜಯ್‍ಕುಮಾರ್ ಅವರು ಪ್ರಾದೇಶಿಕ ಆಯುಕ್ತರಿಗೆ ಚುನಾವಣೆ ಮುಂದೂಡುವಂತೆ ಸೂಚಿಸಿದ್ದಾರೆ.
ಬಿಬಿಎಂಪಿ ಮೇಯರ್/ ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಸುವ ಸಂದರ್ಭದಲ್ಲೇ ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸುವ ಬಗ್ಗೆ ಹೈಕೋರ್ಟ್ ಮಧ್ಯಂತರ ಆದೇಶ ಪ್ರಕಟಿಸಿದೆ. ಹೀಗಾಗಿ ಮೇಯರ್ ಉಪಮೇಯರ್ ಚುನಾವಣೆಯಂದ ಸ್ಥಾಯಿ ಸಮಿತಿಗಳ ಚುನಾವಣೆ ನಡೆಸಬೇಕೆಂದು ವಿಜಯ್ ಕುಮಾರ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿ, ಬಿಬಿಎಂಪಿ ಚುನಾವಣೆ ಮಾಡಲು ಸಿಎಂ ಆದೇಶ ಮಾಡಿದ್ದರು. ಆದರೆ ಸಮಿತಿಗಳ ಚುನಾವಣೆ ಕೂಡ ಮಾಡಬೇಕು ಎಂದು ನ್ಯಾಯಾಲಯದ ಆದೇಶ ಇದೆ. ಮತ್ತೊಂದು ಕಡೆ ಕೆಲವು ಸಮಿತಿ ಚುನಾವಣೆ ಬೇಡ ಎಂದು ಮತ್ತೊಂದು ನ್ಯಾಯಾಲಯ ಹೇಳಿದೆ. ಹೀಗಾಗಿ ಚುನಾವಣೆ ಮುಂದೂಡಲಾಗಿದೆ ಎಂದು ತಿಳಿಸಿದರು.