ಬೆಂಗ್ಳೂರಿನಲ್ಲಿ ಗುರುವಾರ ಟ್ರಾಫಿಕ್ ಸಮಸ್ಯೆ ಸಾಧ್ಯತೆ

Public TV
1 Min Read
traffic web

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಪ್ರವಾಹ ಪರಿಹಾರ ನೀಡಿಲ್ಲ ಎನ್ನುವುದನ್ನು ಖಂಡಿಸಿ ಗುರುವಾರ ಸಿಲಿಕಾನ್ ಸಿಟಿಯ ಬಹುತೇಕ ಕಡೆಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಂಚಾರ ದಟ್ಟಣೆ ಎದುರಾಗುವ ಸಾಧ್ಯತೆ ಹೆಚ್ಚಿದೆ.

ನಗರದ ವಿವಿಧ ಭಾಗಗಳಲ್ಲಿ ಉತ್ತರ ಕರ್ನಾಟಕದ ಜನತೆ ಪ್ರತಿಭಟನೆ ನಡೆಸುತ್ತಿದ್ದು, ರಾಜಾಜಿನಗರ, ಭಾಷ್ಯಂ ವೃತ್ತ, ರಾಮ ಮಂದಿರ, ಸ್ವಾತಂತ್ರ್ಯ ಉದ್ಯಾನವನದ ಬಳಿ ಭಾರೀ ಟ್ರಾಫಿಕ್ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಹೀಗಾಗಿ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಹುಡುಕಿಕೊಳ್ಳುವುದು ಉತ್ತಮ.

bangalore traffic 1

ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ. ಆದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡಿಗಾಸೂ ನೀಡಿಲ್ಲ. ನೆರೆ ಪೀಡಿತರ ಕಣ್ಣೀರು ಒರೆಸುವ ಪ್ರಯತ್ನ ಮಾಡಿಲ್ಲ. ಕರ್ನಾಟಕವನ್ನು ಸಂಪೂರ್ಣವಾಗಿ ಮರೆತು ಹೋಗಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕದ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಂಡಿದೆ.

ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ. ಬೆಳಗ್ಗೆ 9.30ಕ್ಕೆ ರಾಜಾಜಿನಗರದ ಭಾಷ್ಯಂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಅಲ್ಲಿಂದ ರಾಮಮಂದಿರ ಮಾರ್ಗವಾಗಿ ಸ್ವಾತಂತ್ರ್ಯ ಉದ್ಯಾನವನದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ.

blg ramadhurga flood

ಪ್ರತಿಭಟನೆಯಲ್ಲಿ ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದಶಕ ಶಂಕರ್ ಬಿದರಿ ಪ್ರತಿಭಟನೆಗೆ ಚಾಲನೆ ನೀಡಲಿದ್ದಾರೆ ಎಂದು ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಹಲವಾರು ಸಂಘ ಸಂಸ್ಥೆಗಳ ಸಾವಿರಾರು ಜನ ಸದಸ್ಯರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಶಿವಕುಮಾರ್ ತಿಳಿಸಿದ್ದಾರೆ.

ಬೃಹತ್ ಪ್ರತಿಭಟನೆ ನಡೆಯುತ್ತಿರುವುದರಿಂದ ನಗರದ ಕೇಂದ್ರ ಭಾಗ ಮೆಜೆಸ್ಟಿಕ್, ಸ್ವಾತಂತ್ರ್ಯ ಉದ್ಯಾನವನ, ಮೈಸೂರು ಬ್ಯಾಂಕ್ ವೃತ್ತದ ಕಡೆ ಸಂಚರಿಸುವವರು ಸಹ ಪರ್ಯಾಯ ಮಾರ್ಗಗಳನ್ನು ಬಳಸುವುದು ಉತ್ತಮ.

Share This Article
Leave a Comment

Leave a Reply

Your email address will not be published. Required fields are marked *