‘ರಸ್ತೆ ಸುರಕ್ಷತಾ ನಿಯಮದ ಅರಿವಿಲ್ಲದಿರುವುದು ಒಂದು ಸಾಂಕ್ರಾಮಿಕ ರೋಗ’

Public TV
1 Min Read
MND SP

ಮಂಡ್ಯ: ಈ ಹಿಂದೆ ಸಾಂಕ್ರಾಮಿಕ ರೋಗಗಳಾದ ಕಾಲರಾ ಮತ್ತು ಪ್ಲೇಗ್‍ಗಳು ಬಂದಾಗ ಸಾವಿರಾರು ಗ್ರಾಮೀಣ ಜನರು ಸೂಕ್ತ ಚಿಕಿತ್ಸೆಯಿಲ್ಲದೇ ಅಕಾಲಿಕವಾದ ಮೃತ್ಯುವಿಗೆ ಶರಣಾಗುತ್ತಿದ್ದರು. ಆದರೆ ಈಗ ಜಾಗತಿಕ ಜಗತ್ತಿನ ಸ್ಪರ್ಧಾ ಪ್ರಪಂಚದಲ್ಲಿ ರಸ್ತೆ ಅಪಘಾತಗಳಲ್ಲಿ ಬೇಜವಾಬ್ದಾರಿತನದಿಂದ ಅಕಾಲಿಕವಾಗಿ ಸಾಯುವ ಜನರ ಸಂಖ್ಯೆಯೇ ಹೆಚ್ಚಾಗಿದೆ ಎಂದು ಕೆ.ಆರ್.ಪೇಟೆ ಪಟ್ಟಣ್ಣ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಅಭಿಪ್ರಾಯ ಪಟ್ಟಿದ್ದಾರೆ.

ಕೆ.ಆರ್.ಪೇಟೆ ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಪೋದಲ್ಲಿ ನಾಗಮಂಗಲದ ಪ್ರಾದೇಶಿಕ ಸಾರಿಗೆ ಇಲಾಖೆಯ ವತಿಯಿಂದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಂಚಾರಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ರಸ್ತೆ ಸುರಕ್ಷತಾ ನಿಯಮದ ಬಗ್ಗೆ ಅರಿವು ಮೂಡಿಸುವ ಪೋಸ್ಟರ್ ಮತ್ತು ಭಿತ್ತಿಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

MDN SP

ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸದೇ ಅಪಘಾತವು ಸಂಭವಿಸಿ ನಮ್ಮ ಅಮೂಲ್ಯವಾದ ಪ್ರಾಣವು ಹೋಗುತ್ತದೆ. ನಾವುಗಳು ಶಾಶ್ವತವಾಗಿ ಅಂಗವಿಕಲರಾಗುತ್ತೇವೆ ಎಂದು ತಿಳಿದಿದ್ದರೂ ಅಡ್ಡಾದಿಡ್ಡಿಯಾಗಿ ಬೇಕಾಬಿಟ್ಟಿ ವಾಹನ ಚಾಲನೆ ಮಾಡಿ ಅಪಘಾತಕ್ಕೆ ಬಲಿಯಾಗಿ ನಮ್ಮನ್ನು ನಂಬಿರುವ ಕುಟುಂಬದ ಸದಸ್ಯರು, ತಂದೆ-ತಾಯಿ, ಹೆಂಡತಿ-ಮಕ್ಕಳನ್ನು ಅನಾಥರನ್ನಾಗಿ ಮಾಡುತ್ತಿದ್ದೇವೆ ಎಂದರು.

ಮನಸ್ಸನ್ನು ಸ್ಥಿಮಿತದಲ್ಲಿಟ್ಟುಕೊಳ್ಳದೇ ಮೊಬೈಲ್ ಫೋನಿನಲ್ಲಿ ಮಾತನಾಡಿಕೊಂಡು ವಾಹನ ಚಾಲನೆ ಮಾಡಿದರೆ ಅಪಘಾತ ನಡೆಯುತ್ತದೆ. ಕುಡಿದು ವಾಹನ ಚಾಲನೆ ಮಾಡುವುದು, ಓವರ್ ಲೋಡ್ ಮಾಡಿಕೊಂಡು ವಾಹನವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳದೇ ವಾಹನವನ್ನು ಚಾಲನೆ ಮಾಡುವುದರಿಂದಲೂ ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡಿ ವಾಹನ ಚಲಾಯಿಸಬೇಕು ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *